ಲಿಂಗಸುಗೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಮತ್ತು ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದುರ್ಗಾಸಿಂಗ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವವನ್ನು ಜನರಿಗೆ ಪರಿಚಯಿಸುವುದರ ಜತೆಗೆ ಕನ್ನಡ ಸಾಹಿತ್ಯದಲ್ಲಿ ತ್ರಿಪದಿಗಳ ಕೊಡುಗೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಹನುಮಂತಗೌಡ ಎಸ್. ಪಾಟೀಲ್ ವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಸಿ.ಬಿ. ಮಾದಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ವಿಚಾರಗೋಷ್ಠಿಯಲ್ಲಿ ಪ್ರಾಧ್ಯಾಪಕರಾದ ವಿಜಯಕುಮಾರ ಕಟ್ಟಿಮನಿ ಹಾಗೂ ಸುರೇಶ ಗುರುಗುಂಟಾ ಅವರು ತ್ರಿಪದಿ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ತ್ರಿಪದಿಗಳ ಸ್ಥಾನ, ಅವುಗಳ ವೈಶಿಷ್ಟ್ಯ ಹಾಗೂ ಸಾಮಾಜಿಕ ಸಂದೇಶಗಳ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹೇಶ ತೋಟದ, ರಾಜಾ ವಾಸುದೇವ ನಾಯಕ, ಮಂಜುನಾಥ ಕಾಮಿನ್, ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಡಾ. ಕೆ. ಶಶಿಕಾಂತ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತ್ರಿಪದಿ ಸಾಹಿತ್ಯವು ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಸರಳ ಭಾಷೆಯಲ್ಲಿ ಜೀವನಾನುಭವ, ನೀತಿ, ಸಾಮಾಜಿಕ ಚಿಂತನೆ ಹಾಗೂ ಮಾನವೀಯ ಮೌಲ್ಯಗಳನ್ನು ವ್ಯಕ್ತಪಡಿಸುವ ತ್ರಿಪದಿಗಳ ಮಹತ್ವವನ್ನು ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಾಹಿತಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದುರ್ಗಾಸಿಂಗ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎನ್. ಕರಿಯಪ್ಪ, ದುರ್ಗಾಸಿಂಗ್, ಮಹೇಶ ತೋಟದ ಸೇರಿದಂತೆ ಇತರರು ಉಪಸ್ಥಿತರಿದ್ದರು.