ರಾಯಚೂರು, ನ. 1: ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ನೌಕರ ಶರಣಪ್ಪ ಅವರ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ವತಿಯಿಂದ ₹1 ಕೋಟಿ ಮೊತ್ತದ ಪರಿಹಾರ ಚೆಕ್ ವಿತರಿಸಲಾಯಿತು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಸ್ಬಿಐ ಅಧಿಕಾರಿಗಳ ಸಮ್ಮುಖದಲ್ಲಿ ಮೃತ ನೌಕರನ ಕುಟುಂಬದ ಸದಸ್ಯರಿಗೆ ಪರಿಹಾರ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮೃತ ನೌಕರನ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು, ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಂತಹ ಸೌಲಭ್ಯಗಳು ಅನಿರೀಕ್ಷಿತ ಅಪಘಾತಗಳಿಂದ ಸಂಕಷ್ಟಕ್ಕೆ ಸಿಲುಕುವ ನೌಕರರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡ ಸಂದರ್ಭದಲ್ಲಿ ಇಂತಹ ಪರಿಹಾರ ಮೊತ್ತವು ಅವರ ಮುಂದಿನ ಜೀವನಕ್ಕೆ ನೆರವಾಗಲಿದೆ ಎಂದು ತಿಳಿಸಿದರು.
ಮೃತ ಶರಣಪ್ಪ ಅವರ ಸೇವೆಯನ್ನು ಸ್ಮರಿಸಿದ ಸಚಿವರು, ಅವರ ಕುಟುಂಬದ ಸಂಕಷ್ಟಕ್ಕೆ ಸರ್ಕಾರ ಹಾಗೂ ಸರ್ಕಾರಿ ನೌಕರರ ಸಂಘ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ ಮಾತನಾಡಿ, ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ದೊರೆತ ₹1 ಕೋಟಿ ಪರಿಹಾರ ಮೊತ್ತವನ್ನು ಕುಟುಂಬದ ಭವಿಷ್ಯದ ಭದ್ರತೆಗಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ವಿಶೇಷವಾಗಿ ಮಕ್ಕಳ ಶಿಕ್ಷಣ, ಕುಟುಂಬದ ಆರ್ಥಿಕ ಸ್ಥಿರತೆ ಹಾಗೂ ಭವಿಷ್ಯದ ಅಗತ್ಯಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಇಂತಹ ಯೋಜನೆಗಳು ಮಹತ್ವದ್ದಾಗಿವೆ. ಸಂಕಷ್ಟದ ಸಂದರ್ಭದಲ್ಲಿ ನೌಕರರ ಕುಟುಂಬಗಳಿಗೆ ಆರ್ಥಿಕ ನೆರವು ದೊರೆಯುವಂತೆ ಮಾಡಿರುವ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳ ಸಹಕಾರ ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಸಂಘದ ಪದಾಧಿಕಾರಿಗಳು ಮೃತ ನೌಕರನ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಎಸ್ಬಿಐ ಪ್ರಾದೇಶಿಕ ವಲಯ ವ್ಯವಸ್ಥಾಪಕಿ ಸೀತಾಬಾಯಿ, ಬ್ಯಾಂಕ್ ಅಧಿಕಾರಿಗಳಾದ ಯಂಕಪ್ಪ ಫಿರಂಗಿ, ರಾಜಶೇಖರ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಹಾಗೂ ಮೃತ ನೌಕರನ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.



