ರಾಯಚೂರು, ಅ.31: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್ ಹಾಗೂ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಅಕ್ಟೋಬರ್ 30ರಂದು ಸಂಜೆ 6 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಕಾನೂನು ಉಲ್ಲಂಘನೆ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಇತರ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕ್ರಮ ಜರುಗಿಸಲಾಗಿದೆ.

ಕಾರ್ಯಾಚರಣೆಯ ವೇಳೆ 127 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಮೋಟಾರು ವಾಹನ ಕಾಯ್ದೆಯಡಿ ತಪಾಸಣೆ ನಡೆಸಿ 50 ಪ್ರಕರಣಗಳನ್ನು ದಾಖಲಿಸಲಾಗಿದೆ. ಮೋಟಾರು ವಾಹನಗಳ ವಿರುದ್ಧ ಎರಡು ವಿಶೇಷ ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಬಕಾರಿ ಕಾಯ್ದೆಯಡಿ 12 ಪ್ರಕರಣಗಳನ್ನು ದಾಖಲಿಸಿ ಒಟ್ಟು 102 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 895 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ 42 ಪ್ರಕರಣಗಳು ದಾಖಲಾಗಿವೆ. ಹೆಲ್ಮೆಟ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 194 ಪ್ರಕರಣಗಳು, ಕಲಂ 92ರ ಅಡಿಯಲ್ಲಿ 254 ಪ್ರಕರಣಗಳು ಹಾಗೂ ಕಾರ್ಯಾಚರಣೆ ಸಂದರ್ಭದಲ್ಲಿ ಇತರ 217 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಆರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ತಲಾ 56 ಮತ್ತು 161 ಪ್ರಕರಣಗಳು ಇತರ ತಪಾಸಣೆ ವಿಭಾಗಗಳಲ್ಲಿ ದಾಖಲಾಗಿವೆ.

ಇದಲ್ಲದೆ, ಅಕ್ಟೋಬರ್ 30ರಂದು ಸಂಜೆ 5ರಿಂದ ರಾತ್ರಿ 9 ಗಂಟೆಯವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಲಾಯಿತು. ಅಪರಾಧ ಚಟುವಟಿಕೆಗಳ ನಿಯಂತ್ರಣ, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ತಪಾಸಣೆ ಕೈಗೊಂಡರು.

ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದು, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಇಂತಹ ತಪಾಸಣೆಗಳನ್ನು ಮುಂದುವರಿಸುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.