ರಾಯಚೂರು: ತಾಲೂಕಿನ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿರುವ ಬಂಗಾರಪ್ಪ ಕೆರೆಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ, ಕೆರೆಯಲ್ಲಿನ ನೀರಿನ ಸಂಗ್ರಹ ಮಟ್ಟ ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಕೆರೆಯಲ್ಲಿ ಪ್ರಸ್ತುತ 16 ಅಡಿ ನೀರು ಸಂಗ್ರಹವಿದ್ದು, ರೈತರ ಹಿತದೃಷ್ಟಿಯಿಂದ ಮೇಲ್ಭಾಗ ಹಾಗೂ ಕೆಳಭಾಗದ ಪ್ರದೇಶಗಳಿಗೆ ಸಮಾನವಾಗಿ ನೀರು ಹಂಚಿಕೆ ಮಾಡುವುದು ಅಗತ್ಯವಾಗಿದೆ. ವಿಶೇಷವಾಗಿ 98, 99, 99ಎ, 100, 102 ಹಾಗೂ 102ಎ ವಿತರಣಾ ಕಾಲುವೆಗಳ ವ್ಯಾಪ್ತಿಯ ರೈತರಿಗೆ ಸಮರ್ಪಕವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಸುಮಾರು ₹200 ಕೋಟಿ ವೆಚ್ಚದಲ್ಲಿ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆಯ ಮೂಲಕ ಬಂಗಾರಪ್ಪ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ಒದಗಿಸುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಇತ್ತೀಚೆಗೆ ನಡೆದ ಐಸಿಸಿ ಸಭೆಯ ಸೂಚನೆಗಳ ಅನ್ವಯ ಮುಂದಿನ ಕೆಲವು ದಿನಗಳಲ್ಲಿ ಕೆಳಭಾಗದ ಪ್ರದೇಶಗಳಿಗೆ ಮತ್ತೊಮ್ಮೆ ನೀರು ಹರಿಸಲಾಗುವುದು. ನೀರಿನ ಹಂಚಿಕೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದೆ, ಮೇಲ್ಭಾಗ ಹಾಗೂ ಕೆಳಭಾಗದ ರೈತರ ಹಿತಾಸಕ್ತಿಯನ್ನು ಕಾಪಾಡಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬಂಗಾರಪ್ಪ ಕೆರೆಯ ಬಲವರ್ಧನೆ, ಸಂರಕ್ಷಣೆ ಹಾಗೂ ದುರಸ್ತಿ ಕಾಮಗಾರಿಗಳನ್ನು ಅಂದಾಜು ₹100 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಯೋಜಿಸಲಾಗಿದೆ. ಪ್ರಸ್ತುತ ಒಂದು ಟಿಎಂಸಿ ಇರುವ ಕೆರೆಯ ನೀರು ಸಂಗ್ರಹ ಸಾಮರ್ಥ್ಯವನ್ನು 2.5 ಟಿಎಂಸಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಯೋಜನೆಯ ಮೊದಲ ಹಂತದಲ್ಲಿ ₹40 ಕೋಟಿ ಅನುದಾನ ಬಿಡುಗಡೆಯಾಗಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ರೈತರಿಗೆ ಸಕಾಲದಲ್ಲಿ ನೀರು ಪೂರೈಸುವುದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಖಚಿತಪಡಿಸುವುದು ಹಾಗೂ ಭವಿಷ್ಯದಲ್ಲಿ ಕುಡಿಯುವ ನೀರಿನ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಬಂಗಾರಪ್ಪ ಕೆರೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.