ಮಾನ್ವಿ, ಅ.8: ತಾಲೂಕಿನ ಕಪಗಲ್ ಗ್ರಾಮದಲ್ಲಿ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ಶಾಂಭವಿ ಪುರಾಣ ಪ್ರವಚನ ಕಾರ್ಯಕ್ರಮವು ಈ ಬಾರಿ 127ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಕ್ಟೋಬರ್ 11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ಭಕ್ತಿಭಾವ ಹಾಗೂ ಸಡಗರದಿಂದ ಜರುಗಲಿದೆ.

ಗ್ರಾಮದ ಶ್ರೀ ಶಾಂಭವಿ ಸಂಘ, ಶ್ರೀ ವಾಸವಿ ಯುವಜನ ಸಂಘ ಹಾಗೂ ಶ್ರೀ ವಾಸವಿ ಮಹಿಳಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಧಾರ್ಮಿಕ ಆಚರಣೆಗಳ ಮೂಲಕ ಗ್ರಾಮದಲ್ಲಿ ಆಧ್ಯಾತ್ಮಿಕ ವಾತಾವರಣ ನಿರ್ಮಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಕ್ಟೋಬರ್ 11ರಿಂದ 19ರವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9.30ರವರೆಗೆ ಶ್ರೀ ಶಾಂಭವಿ ಪುರಾಣ ಪ್ರವಚನ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಆಧ್ಯಾತ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಈ ಧಾರ್ಮಿಕ ಆಚರಣೆಯು ಗ್ರಾಮದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಪುರಾಣ ಪ್ರವಚನದ ಮೂಲಕ ಭಕ್ತರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದರ ಜೊತೆಗೆ ನೈತಿಕ ಮೌಲ್ಯಗಳು, ಸೌಹಾರ್ದತೆ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಒಂಬತ್ತು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಕಪಗಲ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪುರಾಣ ಪ್ರವಚನ ಆಲಿಸಿ, ಶ್ರೀ ಶಾಂಭವಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶಾಂಭವಿ ಸಂಘ, ಶ್ರೀ ವಾಸವಿ ಯುವಜನ ಸಂಘ ಹಾಗೂ ಶ್ರೀ ವಾಸವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.