ಮಾನ್ವಿ: ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.12ರಂದು ಮಾನ್ವಿ ಪಟ್ಟಣದಲ್ಲಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಬಸಲಿಂಗಪ್ಪ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.12ರಂದು ಬೆಳಿಗ್ಗೆ ಶಾಸಕರ ಭವನದಿಂದ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿಕೊಂಡಿರುವ ರೈತರಿಗೆ ವಿಮಾ ಕಂಪನಿಗಳು ಬಾಕಿ ಇರುವ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ತುಂಗಭದ್ರಾ ಕಾಲುವೆಯ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿಯಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಅರ್ಹ ರೈತರಿಗೆ ಹಕ್ಕುಪತ್ರ ನೀಡಬೇಕು. ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಹಾಗೂ ಸಾರ್ವಜನಿಕ ಸರ್ಕಾರಿ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆಯನ್ನೂ ಪ್ರತಿಭಟನೆಯಲ್ಲಿ ಮುಂದಿಡಲಾಗುವುದು ಎಂದು ಬಸಲಿಂಗಪ್ಪ ತಿಳಿಸಿದರು.

ಕೃಷಿಗೆ ಸಂಬಂಧಿಸಿದ ಕಾನೂನುಗಳ ವಿರುದ್ಧವೂ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು. ಮಾನ್ವಿ ಸಮೀಪದ ಮಲ್ಲಯ್ಯನ ಗುಡ್ಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪವಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಟಿಯುಸಿಐ ರಾಜ್ಯಾಧ್ಯಕ್ಷ ಎಂ.ಡಿ. ಮೈಬೂಬ್ ಸಾಬ್, ಎಐಕೆಎಸ್ ಜಿಲ್ಲಾಧ್ಯಕ್ಷ ವಿ. ಮುದುಕಪ್ಪ ನಾಯಕ, ಉಪಾಧ್ಯಕ್ಷ ಆನಂದ ಭೋವಿ, ತಾಲೂಕು ಅಧ್ಯಕ್ಷ ದಿಲೀಪ್ ಟೈಲರ್, ತಾಲೂಕು ಉಪಾಧ್ಯಕ್ಷ ಯಲ್ಲಪ್ಪ ನಾಯಕ, ನರಸಪ್ಪ ಕಂಬಳತ್ತಿ, ಆಂಜನೇಯ್ಯ ಬಲ್ಲಟಗಿ, ಪ್ರಸಾದ, ದೇವಪ್ಪ ಗುಡದಿನ್ನಿ, ಭೀಮರಾಯ ಗುಡದಿನ್ನಿ, ವಿರೇಶ ಕುರ್ಡಿ, ಹುಚ್ಚರೆಡ್ಡಿ, ಮಲ್ಲಪ್ಪಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.