ರಾಯಚೂರು, ಸೆ.30: ಅಕ್ಟೋಬರ್ 24 ಮತ್ತು 25ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15ಕ್ಕೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಶಾನ್ಯ ವಲಯದ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಮ್ಮೇಳನದ ದಿನಾಂಕ ಬದಲಾವಣೆ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ಹಾಗೂ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಚರ್ಚಿಸಿ, ನೀತಿ ಸಂಹಿತೆಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 24 ಮತ್ತು 25ರ ಬದಲಾಗಿ **ನವೆಂಬರ್ 14 ಮತ್ತು 15ರಂದು 12ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ** ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹೀಗಾಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ವಿವಿಧ ಹಂತದ ಪದಾಧಿಕಾರಿಗಳು, ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಸದಸ್ಯರು ಮತ್ತು ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಬದಲಾದ ದಿನಾಂಕವನ್ನು ಗಮನಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕು ಎಂದು ರಂಗಣ್ಣ ಪಾಟೀಲ ಅಳ್ಳುಂಡಿ ಕೋರಿದ್ದಾರೆ.



