ರಾಯಚೂರು: ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜು ಬಿಡುಗಡೆ ಮಾಡಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಹಲವು ವರ್ಷಗಳ ನಂತರ ರಾಯಚೂರು ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜಿಲ್ಲೆಯ ಐತಿಹಾಸಿಕ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. ಜಿಲ್ಲೆಯ ಸಾಹಿತಿಗಳು, ಕನ್ನಡಪರ ಸಂಘಟನೆಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡಬೇಕು. ಎಲ್ಲರ ಸಹಭಾಗಿತ್ವದೊಂದಿಗೆ ಸಮ್ಮೇಳನವನ್ನು ವೈಶಿಷ್ಟ್ಯಪೂರ್ಣವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮಾಜಿ ಶಾಸಕ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಗೌರವಾಧ್ಯಕ್ಷ ಎ. ಪಾಪಾರೆಡ್ಡಿ ಮಾತನಾಡಿ, ತಾವು ನಗರಸಭೆ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ರಾಯಚೂರು ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿತ್ತು. ಅದರ ನಂತರ ಇದೀಗ ಮತ್ತೆ ನಗರದಲ್ಲಿ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಸಾಹಿತ್ಯಿಕ ಪರಂಪರೆ ಹಾಗೂ ಕನ್ನಡದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಸ್ವಾಗತ ಸಮಿತಿ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಸಾಹಿತ್ಯಾಸಕ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವೀರಹನುಮಾನ ಮಾತನಾಡಿ, ರಾಯಚೂರು ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಕೈಗಾರಿಕಾ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸಮ್ಮೇಳನದ ಲಾಂಛನ ರೂಪಿಸಲಾಗಿದೆ. ಜಿಲ್ಲೆಯ ಕೋಟೆ ಕೊತ್ತಲಗಳು, ಹಟ್ಟಿ ಚಿನ್ನದ ಗಣಿ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್) ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳು ಹಾಗೂ ಹೆಗ್ಗುರುತುಗಳನ್ನು ಲಾಂಛನದಲ್ಲಿ ಅಳವಡಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯ ವೈಶಿಷ್ಟ್ಯಗಳನ್ನು ಒಂದೇ ಲಾಂಛನದಲ್ಲಿ ಪರಿಚಯಿಸುವ ಪ್ರಯತ್ನ ಮಾಡಲಾಗಿದ್ದು, ಸಮ್ಮೇಳನದ ಮೂಲಕ ರಾಯಚೂರಿನ ಸಾಹಿತ್ಯ, ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜನರಿಗೆ ಪರಿಚಯಿಸಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಪದಾಧಿಕಾರಿಗಳಾದ ಕೆ. ಶಾಂತಪ್ಪ, ಜಯಣ್ಣ, ರಂಗಣ್ಣ ಪಾಟೀಲ್ ಅಳ್ಳುಂಡಿ, ಬಸವಪ್ರಭು ಪಾಟೀಲ್ ಬೆಟ್ಟದೂರು, ತಾಯಪ್ಪ ಹೊಸೂರು, ಬಾಬು ಭಂಡಾರಿಗಲ್, ವಿಜಯರಾಜೇಂದ್ರ, ಮಂಜುನಾಥ ಕಾಮಿನ್, ರಾವುತರಾವ್ ಬರೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.



