ರಾಯಚೂರು, ಅ.10: ಕಳೆದ ಏಳು ತಿಂಗಳಿಂದ ಬಾಕಿ ಉಳಿದಿರುವ ವಿಶೇಷಚೇತನರ ಮಾಸಾಶನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ ಮತ್ತು ಯುಆರ್‌ಡಬ್ಲ್ಯೂ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಅಕ್ಟೋಬರ್ 15ರಂದು ರಾಮನಗರದಿಂದ ಬೆಂಗಳೂರು ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ನವ ಕರ್ನಾಟಕ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಮಹ್ಮದ್ ಹುಸೇನ್‌ಸಾಬ ಪರಾಪೂರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ವಿಶೇಷಚೇತನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ ಹಾಗೂ ಯುಆರ್‌ಡಬ್ಲ್ಯೂ ಕಾರ್ಯಕರ್ತರು ಹಲವು ವರ್ಷಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸುವುದು, ಕನಿಷ್ಠ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 30 ದಿನಗಳಿಂದ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಆದರೂ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಹೀಗಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಕಳೆದ ಮಾರ್ಚ್ ತಿಂಗಳಿಂದ ವಿಶೇಷಚೇತನರಿಗೆ ನೀಡಬೇಕಾದ ಮಾಸಾಶನವನ್ನು ತಡೆಹಿಡಿದಿದ್ದು, ಇದರಿಂದ ಲಕ್ಷಾಂತರ ಫಲಾನುಭವಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು. ಮಾಸಾಶನವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಅನೇಕ ವಿಶೇಷಚೇತನರು ತಮ್ಮ ದೈನಂದಿನ ಅಗತ್ಯಗಳು, ಔಷಧೋಪಚಾರ ಹಾಗೂ ಕುಟುಂಬ ನಿರ್ವಹಣೆಗೆ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ಈ ಸಮಸ್ಯೆಯ ಗಂಭೀರತೆಯನ್ನು ಅರಿತು ಬಾಕಿ ಉಳಿದಿರುವ ಏಳು ತಿಂಗಳ ಮಾಸಾಶನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ವಿಶೇಷಚೇತನರ ಕಲ್ಯಾಣ ಯೋಜನೆಗಳನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸುವಲ್ಲಿ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ ಹಾಗೂ ಯುಆರ್‌ಡಬ್ಲ್ಯೂ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ವಿಶೇಷಚೇತನರಿಗೆ ಮಾರ್ಗದರ್ಶನ ನೀಡುವುದು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ ಉದ್ಯೋಗ ಭದ್ರತೆ ಮತ್ತು ಸಮರ್ಪಕ ವೇತನ ಸಿಗುತ್ತಿಲ್ಲ. ಆದ್ದರಿಂದ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಿ ಕನಿಷ್ಠ ವೇತನ ಜಾರಿಗೊಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಮನಗರದಲ್ಲಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 14ರಂದು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾಗಲಿರುವ ಬೃಹತ್ ಪಾದಯಾತ್ರೆಯು ಬೆಂಗಳೂರು ವಿಧಾನಸೌಧದವರೆಗೆ ನಡೆಯಲಿದ್ದು, ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳ ವಿಶೇಷಚೇತನರು ಹಾಗೂ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ ಮತ್ತು ಯುಆರ್‌ಡಬ್ಲ್ಯೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕು. ರಾಯಚೂರು ಜಿಲ್ಲೆಯ ಕಾರ್ಯಕರ್ತರು ಕೂಡ ಒಗ್ಗಟ್ಟಿನಿಂದ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಬಸವರಾಜ ಸಾಸಲಮರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಕಟ್ನನ್ನೂರು, ರಾಜ್ಯ ಒಕ್ಕೂಟದ ಕಾರ್ಯದರ್ಶಿ ಮಹ್ಮದ್ ಅಲಿ ಮಟಮಾರಿ ಉಪಸ್ಥಿತರಿದ್ದರು.