ರಾಯಚೂರು, ನ.12: ಆದಿವಾಸಿ ಸಮುದಾಯಗಳ ಐತಿಹಾಸಿಕ ಹೋರಾಟ, ಸಾಂಸ್ಕೃತಿಕ ಪರಂಪರೆ ಹಾಗೂ ದೇಶದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಜನಜಾತಿಯ ಗೌರವ ದಿವಸದ ಅಂಗವಾಗಿ ನವೆಂಬರ್ 14ರಂದು ನಗರದ ಪ್ರಮುಖ ವೃತ್ತಗಳಲ್ಲಿ ದೀಪ ಬೆಳಗಿಸುವ ಹಾಗೂ ಸ್ವಚ್ಛತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರೂಪಾ ಶ್ರೀನಿವಾಸ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಡಕಟ್ಟು ಸಮುದಾಯಗಳ ವಿಶಿಷ್ಟ ಜೀವನಶೈಲಿ, ಭಾಷೆ, ಕಲೆ, ಸಂಪ್ರದಾಯ ಹಾಗೂ ಪ್ರಕೃತಿಯೊಂದಿಗೆ ಹೊಂದಿರುವ ನಿಕಟ ಸಂಬಂಧವು ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಮುಖ ಭಾಗವಾಗಿದೆ. ಈ ಪರಂಪರೆಯನ್ನು ಸಂರಕ್ಷಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿ ಸಮುದಾಯಗಳ ಅನೇಕ ಹೋರಾಟಗಾರರು ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರತಿವರ್ಷ ನವೆಂಬರ್ 15ರಂದು ಜನಜಾತಿಯ ಗೌರವ ದಿವಸ ಆಚರಿಸಲು ಘೋಷಿಸಿದೆ ಎಂದು ತಿಳಿಸಿದರು.
ಈ ದಿನಾಚರಣೆಯ ಹಿನ್ನೆಲೆಯಲ್ಲಿ ನವೆಂಬರ್ 14ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತ ಸೇರಿದಂತೆ ವಿವಿಧ ಪ್ರಮುಖ ವೃತ್ತಗಳಲ್ಲಿ ದೀಪಗಳನ್ನು ಬೆಳಗಿಸಲಾಗುವುದು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸಲಾಗುವುದು ಎಂದರು.
ನವೆಂಬರ್ 15ರಂದು ನಗರದ ವಾಲ್ಮೀಕಿ ಭವನದಲ್ಲಿ ಜನಜಾತಿಯ ಗೌರವ ದಿವಸವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಬುಡಕಟ್ಟು ಸಮುದಾಯಗಳ ಇತಿಹಾಸ, ಸ್ವಾತಂತ್ರ್ಯ ಹೋರಾಟದಲ್ಲಿನ ಪಾತ್ರ, ಸಾಮಾಜಿಕ ಕೊಡುಗೆ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಇಂತಹ ಕಾರ್ಯಕ್ರಮಗಳು ಸಮುದಾಯದ ಯುವಜನರಲ್ಲಿ ತಮ್ಮ ಇತಿಹಾಸ ಮತ್ತು ಪರಂಪರೆಯ ಕುರಿತು ಅರಿವು ಮೂಡಿಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಬುಡಕಟ್ಟು ಸಮುದಾಯಗಳ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸಾರ್ವಜನಿಕರು ಜನಜಾತಿಯ ಗೌರವ ದಿವಸದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ರೂಪಾ ಶ್ರೀನಿವಾಸ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಗದೀಶ ನಾಯಕ, ವೀರೇಶ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.



