ರಾಯಚೂರು: ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ಉದ್ದೇಶದಿಂದ ನವೆಂಬರ್ 14ರಂದು ದೇವಸುಗೂರು ಹೋಬಳಿ ವ್ಯಾಪ್ತಿಯಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದ್ದಾರೆ.
ರಾಯಚೂರು ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ದೇವಸುಗೂರಿನ ಶ್ರೀ ಸುಗ್ಗುರೇಶ್ವರ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಘೋಷವಾಕ್ಯದಡಿ ನಡೆಯುವ ಆಂದೋಲನದ ಮೂಲಕ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು, ಸೌಲಭ್ಯಗಳು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಜನರಿಗೆ ಮಾಹಿತಿ ಒದಗಿಸಲಾಗುವುದು. ಗ್ರಾಮೀಣ ಪ್ರದೇಶದ ಜನರು ಸರ್ಕಾರಿ ಸೇವೆಗಳಿಗಾಗಿ ಕಚೇರಿಗಳಿಗೆ ಪದೇಪದೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನು ಜನರಿಗೆ ಮತ್ತಷ್ಟು ಹತ್ತಿರವಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ದೇವಸುಗೂರು ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಲಿದೆ. ಸಾರ್ವಜನಿಕರಿಂದ ಸ್ವೀಕರಿಸುವ ಮನವಿಗಳಿಗೆ ನಿಯಮಾನುಸಾರ ಸ್ಪಂದಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳುವ ಆಶಯ ಹೊಂದಲಾಗಿದೆ ಎಂದು ಹೇಳಿದರು.
ಸರ್ಕಾರದ ಜನಪರ ಯೋಜನೆಗಳ ಪ್ರಯೋಜನಗಳು ಗ್ರಾಮೀಣ ಭಾಗದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕು. ಸಾರ್ವಜನಿಕರು ತಮ್ಮ ಹಕ್ಕುಗಳು ಹಾಗೂ ಲಭ್ಯವಿರುವ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವು ಹೊಂದಿ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಆಂದೋಲನ ಆಯೋಜಿಸಲಾಗಿದೆ ಎಂದು ವಿವರಿಸಿದರು.
ದೇವಸುಗೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾರ್ವಜನಿಕರು ನವೆಂಬರ್ 14ರಂದು ನಡೆಯಲಿರುವ ಪ್ರಜಾ ಸೇವಾ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಕುಂದುಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಬಸನಗೌಡ ದದ್ದಲ್ ಹಾಗೂ ತಾಲೂಕು ಆಡಳಿತ ಮನವಿ ಮಾಡಿದೆ.



