ಲಿಂಗಸುಗೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನವೆಂಬರ್ 15ರಂದು ಕಲಬುರಗಿಯಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪಿಡಿಒಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ಹಲವು ವರ್ಷಗಳಿಂದ ಸೇವಾ ಸೌಲಭ್ಯಗಳು, ವೇತನ ಪರಿಷ್ಕರಣೆ, ಹುದ್ದೆಗಳ ಉನ್ನತೀಕರಣ ಹಾಗೂ ಮುಂಬಡ್ತಿಗೆ ಸಂಬಂಧಿಸಿದ ಬೇಡಿಕೆಗಳು ಬಾಕಿ ಉಳಿದಿದ್ದು, ಸರ್ಕಾರ ಈ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 3,827 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಗ್ರೂಪ್ ‘ಸಿ’ ವೃಂದದಿಂದ ಗ್ರೂಪ್ ‘ಬಿ’ ವೃಂದಕ್ಕೆ ಮೇಲ್ದರ್ಜೆಗೇರಿಸಬೇಕು. ರಾಜ್ಯದಲ್ಲಿ ಮಂಜೂರಾಗಿರುವ ಒಟ್ಟು 6,021 ಪಿಡಿಒ ಹುದ್ದೆಗಳ ಪೈಕಿ ಈ ಹಿಂದೆ 1,500 ಹುದ್ದೆಗಳನ್ನು ಗ್ರೂಪ್ ‘ಬಿ’ ವೃಂದಕ್ಕೆ ಉನ್ನತೀಕರಿಸಲಾಗಿದೆ. ಉಳಿದ ಹುದ್ದೆಗಳ ಉನ್ನತೀಕರಣ ಹಾಗೂ ಖಾಲಿ ಇರುವ 694 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಅರ್ಹ ಅಧಿಕಾರಿಗಳಿಗೆ ಜ್ಯೇಷ್ಠತೆಯ ಆಧಾರದಲ್ಲಿ ನಿಯಮಾನುಸಾರ ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
2017ರ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವ ಮೂಲವೇತನ ಹಾಗೂ ಇಲಾಖಾ ಸಂಘಟನೆಗಳು ಸಲ್ಲಿಸಿರುವ ಬೇಡಿಕೆಗಳನ್ನು ಪರಿಗಣಿಸಿ ಪಿಡಿಒಗಳ ವೇತನ ಶ್ರೇಣಿಯನ್ನು ಶೀಘ್ರ ಪರಿಷ್ಕರಿಸಬೇಕು. ಸಮಾನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ ವೇತನ ಮತ್ತು ಸೇವಾ ಸೌಲಭ್ಯಗಳಲ್ಲಿ ಕಂಡುಬರುತ್ತಿರುವ ತಾರತಮ್ಯವನ್ನು ನಿವಾರಿಸಿ ನ್ಯಾಯಯುತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರದ ನೂರಾರು ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಅವುಗಳ ಸಮರ್ಪಕ ನಿರ್ವಹಣೆಯ ಹೊಣೆಗಾರಿಕೆ ಪಿಡಿಒಗಳ ಮೇಲಿದೆ. ದಿನದಿಂದ ದಿನಕ್ಕೆ ಆಡಳಿತಾತ್ಮಕ ಜವಾಬ್ದಾರಿಗಳು ಹೆಚ್ಚುತ್ತಿರುವುದರಿಂದ ಕರ್ತವ್ಯ ನಿರ್ವಹಣೆಗೆ ಅಗತ್ಯವಾದ ಅಧಿಕಾರ ಹಾಗೂ ಸೌಲಭ್ಯಗಳನ್ನು ಒದಗಿಸುವುದು ಅತ್ಯವಶ್ಯಕವಾಗಿದೆ. ಹೆಚ್ಚಿನ ಜವಾಬ್ದಾರಿಗಳಿಗೆ ಅನುಗುಣವಾಗಿ ಪಿಡಿಒಗಳಿಗೆ ಆಡಳಿತಾತ್ಮಕ ಅಧಿಕಾರ ನೀಡಬೇಕು ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಸಂದರ್ಭದಲ್ಲಿ ಪಿಡಿಒಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಅಧಿಕಾರಿಗಳ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವವರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪಿಡಿಒಗಳು ಯಾವುದೇ ಒತ್ತಡವಿಲ್ಲದೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲಕರ ವಾತಾವರಣ ನಿರ್ಮಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪಿಡಿಒಗಳ ಹುದ್ದೆಗಳ ಉನ್ನತೀಕರಣ, ವೇತನ ಪರಿಷ್ಕರಣೆ, ಮುಂಬಡ್ತಿ, ಸೇವಾ ಭದ್ರತೆ ಹಾಗೂ ಅಗತ್ಯ ಆಡಳಿತಾತ್ಮಕ ಅಧಿಕಾರ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಕಲಬುರಗಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಸಚಿವರು, ಸಂಸದರು, ಹಾಲಿ ಮತ್ತು ಮಾಜಿ ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಿಂಗಸುಗೂರು ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲ ಪಿಡಿಒಗಳು ಒಗ್ಗಟ್ಟಿನಿಂದ ಭಾಗವಹಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಬೇಕು. ಸಂಘಟಿತ ಹೋರಾಟದ ಮೂಲಕ ಸೇವಾ ಸೌಲಭ್ಯಗಳನ್ನು ಪಡೆಯಲು ಎಲ್ಲರೂ ಸಹಕರಿಸಬೇಕು ಎಂದು ವಿಶ್ವನಾಥ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಪ್ರವೀಣಕುಮಾರ್ ಹಾಗೂ ತಿಮ್ಮಣ್ಣ ಭೋವಿ ಉಪಸ್ಥಿತರಿದ್ದರು.



