ರಾಯಚೂರು: ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಅಂಬಾ ಮಠದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ವಿರುದ್ಧ ಕೇಳಿಬಂದಿರುವ ವಿವಿಧ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎನ್ನಲಾದ ಮಠವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 19ರಂದು ಪಲಕನಮರಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಶೈಲ ಭಕ್ತರ ಸಮಿತಿಯ ಗ್ರಾಮ ಪಂಚಾಯಿತಿ ಮಟ್ಟದ ಸಂಚಾಲಕ ಸಿದ್ದನಗೌಡ ಪೊಲೀಸ್ ಪಾಟೀಲ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ನಂಬಿಕೆಗಳನ್ನು ದುರ್ಬಳಕೆ ಮಾಡಿಕೊಂಡು ಜನರಲ್ಲಿ ತಪ್ಪು ಕಲ್ಪನೆಗಳನ್ನು ಮೂಡಿಸುವ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಶ್ರೀಶೈಲ ಮಲ್ಲಿಕಾರ್ಜುನ ದೇವರು ಹಾಗೂ ಶರಣರ ವಚನಗಳ ಅರ್ಥವನ್ನು ತಿರುಚಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ನಾಮದೇವಗೌಡ ಅವರು ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಅಧ್ಯಾತ್ಮ ಮತ್ತು ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಮಹಿಳೆಯರನ್ನು ವಶೀಕರಣಕ್ಕೆ ಒಳಪಡಿಸುವುದು, ಮಾಟಮಂತ್ರದ ಭಯ ಹುಟ್ಟಿಸಿ ಸಾರ್ವಜನಿಕರಿಂದ ಹಣ ಪಡೆಯುವುದು ಸೇರಿದಂತೆ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಇವುಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಜುಲೈ 9ರಂದು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಅಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಸುದ್ದಿಗೋಷ್ಠಿಯ ಮೂಲಕವೂ ಸಮಸ್ಯೆಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿತ್ತು. ಆದರೂ ಈವರೆಗೆ ಅಧಿಕಾರಿಗಳಿಂದ ನಿರೀಕ್ಷಿತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮದರಕಲ್ ಗ್ರಾಮದ ಸರ್ವೇ ನಂಬರ್ 9999ರ ಸರ್ಕಾರಿ ಗೈರಾಣು ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮಠ ನಿರ್ಮಿಸಲಾಗಿದೆ ಎಂಬ ಆರೋಪವೂ ಇದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದಾಗ ಜಮೀನಿನ ಸರ್ವೇ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ. ಆದರೆ, ಭೂಮಿಯ ಅಳತೆ ಹಾಗೂ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಯಾವುದೇ ಪರಿಣಾಮಕಾರಿ ಕ್ರಮ ಜರುಗಿಸಿಲ್ಲ ಎಂದು ದೂರಿದರು.
ಸರ್ಕಾರಿ ಭೂಮಿ ಸಾರ್ವಜನಿಕರ ಹಿತಕ್ಕಾಗಿ ಬಳಕೆಯಾಗಬೇಕು. ಭೂಮಿಯ ಒತ್ತುವರಿ ಆರೋಪವನ್ನು ಪರಿಶೀಲಿಸಿ ಅಕ್ರಮ ಸಾಬೀತಾದಲ್ಲಿ ಮಠವನ್ನು ತೆರವುಗೊಳಿಸಬೇಕು. ತೆರವುಗೊಳಿಸಿದ ಜಾಗವನ್ನು ನಿವೇಶನರಹಿತ ಬಡ ಕುಟುಂಬಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ನಾಮದೇವಗೌಡ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರನ್ನು ಗ್ರಾಮದಿಂದ ಹೊರಹಾಕಬೇಕು ಎಂದು ಒತ್ತಾಯಿಸಿದರು.
ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಕ್ಟೋಬರ್ 19ರಂದು ಪಲಕನಮರಡಿ ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಬಿಸಾಬ್, ಹುಸೇನ್ ಸಾಬ್, ಬಂದಿಗಿ ಸಾಬ್ ಸೇರಿದಂತೆ ಇತರರು ಉಪಸ್ಥಿತರಿದ್ದರು.



