ರಾಯಚೂರು: ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶಾಲಿವಾಹನ ಶಕೆ 1948ರ ಪರಾಭವ ಸಂವತ್ಸರದ ಆಶ್ವೀಜ ಶುದ್ಧ ನವಮಿಯ ಅಂಗವಾಗಿ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ ಪರಂಪರೆಯನ್ನು ಮುಂದುವರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಸಿದ್ದರಾಮೇಶ್ವರರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಭೋವಿ ಸಮಾಜದ ಮುಖಂಡರು, ಹಿರಿಯರು, ಮಹಿಳೆಯರು, ಯುವಕರು ಹಾಗೂ ಭಕ್ತರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಸ್ವಾಮಿ, ತಾಲೂಕು ಅಧ್ಯಕ್ಷ ಎಸ್. ಶಿವರಾಜ ಪೂರತಿಪ್ಲಿ ಹಾಗೂ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯ ಮೂಲಕ ಸಮಾಜದ ಬಾಂಧವರು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.



