ರಾಯಚೂರು: ನಗರದ ಎಲ್ಬಿಎಸ್ ನಗರದಲ್ಲಿ ಸಿಗರೇಟ್ ಉಧಾರ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕ ಬಾಪೂರು ನರಸಿಂಹ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾದ ಘಟನೆಯನ್ನು ಖಂಡಿಸಿ ಆರ್ಯವೈಶ್ಯ ಸಮಾಜದ ಮುಖಂಡರು ಹಾಗೂ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಜಮಾಯಿಸಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ನರಸಿಂಹ ಅವರ ಕೊಲೆ ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಆರ್ಯವೈಶ್ಯ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯನ್ನು ಖಂಡಿಸಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲು ವಾಟ್ಸಾಪ್ ಮೂಲಕ ಸಮಾಜದ ಸದಸ್ಯರಿಗೆ ಮಾಹಿತಿ ರವಾನಿಸಿ, ಸಂಜೆ 5 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಸೇರುವಂತೆ ಕರೆ ನೀಡಲಾಗಿತ್ತು.
ಈ ಕರೆಗೆ ಸ್ಪಂದಿಸಿದ ನಗರದ ವಿವಿಧ ಬಡಾವಣೆಗಳ ಸುಮಾರು 400ರಿಂದ 500 ಮಂದಿ ಆರ್ಯವೈಶ್ಯ ಸಮಾಜದ ಸದಸ್ಯರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಜಮಾಯಿಸಿ, ಕೊಲೆ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಕ್ಷುಲ್ಲಕ ಕಾರಣಕ್ಕಾಗಿ ಅಂಗಡಿ ಮಾಲೀಕನನ್ನು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, ಇಂತಹ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ತಕ್ಷಣ ಪತ್ತೆಹಚ್ಚಿ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಆರೋಪಿಗಳನ್ನು 24 ಗಂಟೆಗಳೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಆರ್ಯವೈಶ್ಯ ಸಮಾಜದ ವತಿಯಿಂದ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಆರ್ಯವೈಶ್ಯ ಸಮಾಜದ ಅಧ್ಯಕ್ಷೆ ಸಾವಿತ್ರಿ ಪುರುಷೋತ್ತಮ ಅವರು ಮಾಹಿತಿ ನೀಡಿದ್ದು, ನರಸಿಂಹ ಅವರ ಹತ್ಯೆಯಿಂದ ಸಮಾಜದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



