ರಾಯಚೂರು: ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಮಗುವಿಗೂ ಸಮಾನ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಆದರೆ ರಾಜ್ಯ ಸರ್ಕಾರ ಶಾಲೆಗಳ ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗುತ್ತಿದ್ದು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೆ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಹೇಳುತ್ತಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ ಎಂದು ವಿದ್ಯಾ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಶಿಕ್ಷಣ ನೀತಿಯನ್ನು ಖಂಡಿಸಿ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕಲ್ಪಿಸಬೇಕೆಂದು ಹಲವು ಹಂತಗಳಲ್ಲಿ ಹೋರಾಟ ನಡೆಸಲಾಗಿದೆ. ಕಳೆದ 10 ವರ್ಷಗಳಿಂದ ತಮ್ಮ ವೇದಿಕೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ಭರವಸೆಗಳಷ್ಟೇ ದೊರೆಯುತ್ತಿವೆ. ಸರ್ಕಾರಿ ಶಾಲೆಗಳ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ದೂರಿದರು.

ರಾಜ್ಯದಲ್ಲಿ 62,420ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅಲ್ಲದೆ, 7,630 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರೇ ಇಲ್ಲದ ಶಾಲೆಗಳಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕೊಂದರಲ್ಲೇ 105 ಶಾಲೆಗಳಲ್ಲಿ ಶಿಕ್ಷಕರ ಕೊರತೆ ಗಂಭೀರವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಸುಮಾರು 26 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮುಖ್ಯವಾಗಿ ಬಡ, ದಲಿತ, ಹಿಂದುಳಿದ, ಆದಿವಾಸಿ, ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಹಾಗೂ ಬಡ ಕುಟುಂಬಗಳ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕು. ಶಿಕ್ಷಕರ ಕೊರತೆ ಹಾಗೂ ಮೂಲಸೌಕರ್ಯಗಳ ಅಭಾವದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

ಶಿಕ್ಷಣ ಹಕ್ಕು ಕಾಯ್ದೆಯ ನಿಯಮದಂತೆ 1ರಿಂದ 5ನೇ ತರಗತಿಯ ಮಕ್ಕಳಿಗೆ ನೆರೆಹೊರೆಯಲ್ಲಿ ಶಾಲೆ ಹಾಗೂ 6ರಿಂದ 8ನೇ ತರಗತಿಯ ಮಕ್ಕಳಿಗೆ ನಿಗದಿತ ಅಂತರದೊಳಗೆ ಶಾಲೆ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಾಲೆಗಳ ವಿಲೀನ ಅಥವಾ ಮುಚ್ಚುವಿಕೆಯ ಸಂದರ್ಭದಲ್ಲಿ ಈ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಆಗ್ರಹಿಸಿದರು.

ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾದ ನಂತರವೂ ಅನೇಕ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಮುಂದುವರಿದಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಮೊದಲು ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ತರಗತಿವಾರು ಹಾಗೂ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಅಂಕಗಳಿಗೆ ಸಂಬಂಧಿಸಿದ ಮಾನದಂಡಗಳಲ್ಲಿ ಸಡಿಲಿಕೆ ಮಾಡುವುದಕ್ಕಿಂತ ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಬೇಕು. ಶಿಕ್ಷಕರ ನೇಮಕ ಹಾಗೂ ಶಾಲೆಗಳ ಮೂಲಸೌಕರ್ಯ ಸುಧಾರಣೆಯೇ ಇದಕ್ಕೆ ಶಾಶ್ವತ ಪರಿಹಾರ ಎಂದರು.

ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ಶಾಲೆಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಹಾಗೂ ಗ್ರಂಥಾಲಯ ಸೌಲಭ್ಯ ಕಲ್ಪಿಸಬೇಕು, ಪ್ರತಿ ಶಾಲೆಗೆ ಒಬ್ಬ ಪರಿಚಾರಕರನ್ನು ನೇಮಿಸಬೇಕು, ಶಿಕ್ಷಣ ಹಕ್ಕು ಕಾಯ್ದೆಯ ನೆರೆಹೊರೆ ಶಾಲೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಕೆಪಿಎಸ್/ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು.

ಅಲ್ಲದೆ, ರಾಜ್ಯದಲ್ಲಿ ಆರ್‌ಟಿಇ ಎಷ್ಟರ ಮಟ್ಟಿಗೆ ಸಮರ್ಪಕವಾಗಿ ಅನುಷ್ಠಾನಗೊಂಡಿದೆ ಎಂಬುದನ್ನು ಪರಿಶೀಲಿಸಲು ಶಿಕ್ಷಣ ತಜ್ಞರ ರಾಜ್ಯಮಟ್ಟದ ಸಮಿತಿ ರಚಿಸಿ ಶ್ವೇತಪತ್ರ ಹೊರಡಿಸಬೇಕು. ಸರ್ಕಾರ ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬಡ ಹಾಗೂ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಂತೇಶ, ಮಲ್ಲೇಶ್, ಸ್ವಪ್ನ ದೀಪ, ಶೈನಜ್, ಹಫೀಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.