ರಾಯಚೂರು, ಅ.25: ಜಿಲ್ಲಾಡಳಿತ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 26ರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಗಿರಿಯಪ್ಪ ನಾಯಕ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಯಂತಿ ಅಂಗವಾಗಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿರುವ ಪ್ರತಿಮೆಗೆ ಗಣ್ಯರು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಪೂಜೆ ಸಲ್ಲಿಸಿ, ಪುಷ್ಪಮಾಲೆ ಅರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವಿವರಿಸಿದರು.

ಬಳಿಕ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದ್ದು, ಸಾಂಪ್ರದಾಯಿಕ ಕುಂಭ-ಕಳಸಗಳೊಂದಿಗೆ ಸಮಾಜದ ಬಾಂಧವರು ಭಾಗವಹಿಸಲಿದ್ದಾರೆ. ವಾಲ್ಮೀಕಿ ವೃತ್ತದಿಂದ ಆರಂಭವಾಗುವ ಮೆರವಣಿಗೆಯು ಬಸವೇಶ್ವರ ವೃತ್ತದ ಮೂಲಕ ಅಶಾಪುರ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ಭವನಕ್ಕೆ ತಲುಪಲಿದೆ ಎಂದು ಹೇಳಿದರು.

ನವೀಕರಣಗೊಂಡಿರುವ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಯಂತಿಯ ಮುಖ್ಯ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ, ಸಾಹಿತ್ಯ ಸಾಧನೆ, ಸಾಮಾಜಿಕ ಚಿಂತನೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಅವರ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಾಲ್ಮೀಕಿ ನಾಯಕ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಲಾಗುವುದು. ಅಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಸಮಾಜದ ಮುಖಂಡರು ಹಾಗೂ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಮಹರ್ಷಿ ವಾಲ್ಮೀಕಿ ಅವರು ತಮ್ಮ ಸಾಹಿತ್ಯದ ಮೂಲಕ ಮಾನವೀಯತೆ, ಧರ್ಮ, ಸತ್ಯ ಹಾಗೂ ನೈತಿಕ ಮೌಲ್ಯಗಳನ್ನು ಸಾರಿದ್ದಾರೆ. ಅವರ ಜೀವನ ಸಂದೇಶ ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿದೆ. ಜಯಂತಿ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳುವ ಕಾರ್ಯಕ್ರಮವಾಗಬೇಕು ಎಂದು ಗಿರಿಯಪ್ಪ ನಾಯಕ ಅಭಿಪ್ರಾಯಪಟ್ಟರು.

ಜಿಲ್ಲೆಯ ವಿವಿಧ ಭಾಗಗಳಿಂದ ಸಮಾಜದ ಮುಖಂಡರು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಪ್ರಭು ಹುಲಿನಾಯಕ, ಡಾ. ಶಾರದ ಹುಲಿ ನಾಯಕ, ಎನ್. ರಘುವೀರ ನಾಯಕ, ತಿಮ್ಮಪ್ಪ ನಾಯಕ, ರಾಮು ನಾಯಕ ಗಂಜ್, ತಿಮ್ಮಪ್ಪ ನಿಯರಿ ನಾಯಕ, ರಾಮ ನಾಯಕ ಸಿಂಗನೋಡಿ, ರಾಮು ನಾಯಕ ಅಸ್ಕಿಹಾಳ, ವೆಂಕಟೇಶ ಮಲ್ಲಿಕಾರ್ಜುನ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.