ಲಿಂಗಸುಗೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿಯನ್ನು ಖಂಡಿಸಿ ಸೆ.28ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ವರ್ಗಗಳ ಒಕ್ಕೂಟದ ಸದಸ್ಯ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಗಡಿಯಾರ ಚೌಕದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಅವರು, ಈ ಪ್ರಕ್ರಿಯೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಅಹಿಂದ ಮುಖಂಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ. ನಡೆಸಿದ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಗೋವಿಂದ ನಾಯಕ ಆರೋಪಿಸಿದರು. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂಬುದು ತಮ್ಮ ಆರೋಪವಾಗಿದ್ದು, ಇದರ ವಿರುದ್ಧವೂ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು ಎಂದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದರು. ಕಾಂಗ್ರೆಸ್ ಹಾಗೂ ಅಹಿಂದ ನಾಯಕರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಯುವಕರು ಮತ್ತು ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಕ್ಷಣೆಗೆ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲವಾಗಿ ಅಹಿಂದ ಸಮಾಜ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷ ನಿಲ್ಲಲಿದ್ದು, ಸೆ.28ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಯುವಕರು, ಬುದ್ಧಿಜೀವಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮುಖಂಡರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಗುತ್ತೇದಾರ, ಗುಂಡಪ್ಪ ಸಾಹುಕಾರ, ಡಿ.ಜಿ. ಗುರಿಕಾರ, ಗುಂಡಪ್ಪ ನಾಯಕ, ಸಂಜೀವಪ್ಪ ಹುನಕುಂಟಿ, ಮಹ್ಮದ್ ರಫೀ, ಉಮೇಶ ಐಹೋಳೆ, ಆದೇಶ ನಾಯಕ ಸೇರಿದಂತೆ ಅಹಿಂದ ವರ್ಗಗಳ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.