ರಾಯಚೂರು: ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 28ರಂದು ರಾಯಚೂರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಸೇನಾ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ರಾಜಾಚಂದ್ರ ರಾಮನಗೌಡ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಕೊರತೆ, ಬೆಳೆ ಹಾನಿ, ಕೃಷಿ ಸಾಲ, ನೀರಾವರಿ ಸಮಸ್ಯೆ ಹಾಗೂ ವಿದ್ಯುತ್ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಕಾರ್ಮಿಕರಿಗೂ ಸಮರ್ಪಕ ಉದ್ಯೋಗ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರು ಹಾಗೂ ಗ್ರಾಮೀಣ ಕಾರ್ಮಿಕರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ಬೆಳೆ ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ಎಕರೆಗೆ ₹50 ಸಾವಿರದವರೆಗೆ ಪರಿಹಾರ ನೀಡಬೇಕು. ಅರ್ಹ ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳಿಂದ ಸಮರ್ಪಕ ನೀರು ಹರಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 12 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.

ಭತ್ತ, ಹತ್ತಿ, ಜೋಳ, ತೊಗರಿ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬೆಳೆ ವಿಮೆ ಹಾಗೂ ಬಾಕಿ ಹಣ ಬಿಡುಗಡೆ ಮಾಡಬೇಕು. ಗುಣಮಟ್ಟದ ಬೀಜ, ರಸಗೊಬ್ಬರ ಪೂರೈಸುವುದರ ಜೊತೆಗೆ ನೀರಾವರಿ ಕಾಲುವೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಹಾಗೂ ಪಶುವೈದ್ಯಕೀಯ ಸೌಲಭ್ಯ ಒದಗಿಸಬೇಕು. ಅಗತ್ಯವಿರುವ ಕಡೆ ಗೋಶಾಲೆ ತೆರೆಯಬೇಕು. ಕೃಷಿ ಕಾರ್ಮಿಕರಿಗೆ ಉಚಿತ ಪಡಿತರ, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಹಾಗೂ ಬಾಕಿ ಕೂಲಿ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಬೇಡಿಕೆಗಳ ಈಡೇರಿಕೆಗೆ ಕಾಲಮಿತಿಯ ಕ್ರಮಯೋಜನೆ ರೂಪಿಸುವಂತೆ ಒತ್ತಾಯಿಸಿ ಅ.28ರಂದು ನಡೆಯುವ ಹೋರಾಟದಲ್ಲಿ ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶಿವಸೇನಾ ಗ್ರಾಮೀಣ ಘಟಕದ ಅಧ್ಯಕ್ಷ ಸಂತೋಷ್ ಗೌಡ ಗುಡಿ, ಪ್ರಧಾನ ಕಾರ್ಯದರ್ಶಿ ಪ್ರಭು ಮಡಿವಾಳ, ಜಿಲ್ಲಾ ಉಪಾಧ್ಯಕ್ಷ ರಾಮ, ಅಮೀನರೆಡ್ಡಿ ಗೌಡ ಪೊಲೀಸ್ ಪಾಟೀಲ್ ಉಪಸ್ಥಿತರಿದ್ದರು.