ರಾಯಚೂರು: ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.29ರಂದು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಮರಳಿ ಸುಲ್ತಾನಪುರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ, ಕೂಲಿ ಸೇರಿದಂತೆ ಕೃಷಿಗೆ ತಗಲುವ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಖರ್ಚಿಗೆ ತಕ್ಕಂತೆ ಮಾರುಕಟ್ಟೆ ದರ ಸಿಗುತ್ತಿಲ್ಲ. ಪರಿಣಾಮ ಕೃಷಿಕರು ಆರ್ಥಿಕ ಸಂಕಷ್ಟ ಎದುರಿಸುವುದರೊಂದಿಗೆ ಸಾಲದ ಹೊರೆಯಲ್ಲಿಯೇ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆ ನಿರೀಕ್ಷಿತ ಫಲ ನೀಡಿಲ್ಲ ಎಂದು ಆರೋಪಿಸಿದ ಅವರು, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ದರ ದೊರೆಯದಿರುವುದರಿಂದ ಕೃಷಿಯನ್ನೇ ಅವಲಂಬಿಸಿರುವ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ರೈತರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸಲು ಸರ್ಕಾರ ದೀರ್ಘಕಾಲಿಕ ಮತ್ತು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಉತ್ಪಾದನೆಗೆ ರೈತರು ಮಾಡುವ ಸಂಪೂರ್ಣ ವೆಚ್ಚವನ್ನು ಗಣನೆಗೆ ತೆಗೆದುಕೊಂಡು, ಅದರ ಮೇಲೆ ನ್ಯಾಯಸಮ್ಮತ ಲಾಭಾಂಶ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಸ್ವಾಮಿನಾಥನ್ ಆಯೋಗ ಶಿಫಾರಸು ಮಾಡಿದೆ. ಈ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಉಂಟಾದ ಸಂದರ್ಭಗಳಲ್ಲಿ ರೈತರು ಅನುಭವಿಸುವ ಆರ್ಥಿಕ ನಷ್ಟವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ರೈತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಸೆ.29ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಹೋರಾಟದ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ರಾಯಚೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಶರಣಪ್ಪ ಮರಳಿ ಸುಲ್ತಾನಪುರ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನರಸಪ್ಪ ದೇವಸೂಗೂರು, ವೆಂಕಟೇಶ್, ಚನ್ನಪ್ಪ, ಮಹದೇವ ಏಗನೂರು, ನಿಂಗಪ್ಪ, ತಿಮ್ಮಪ್ಪ ಪೂಜಾರಿ, ಗಂಗಪ್ಪ, ಹನುಮಂತರಾಯ ನಾಯಕ್ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.