ದೇವದುರ್ಗ, ಸೆ.27: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯಾಚರಣೆಯನ್ನು ಖಂಡಿಸಿ ಸೆ.29ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರಾದ ರಂಗಪ್ಪ ಗೋಸಲ್ ಹಾಗೂ ವಿಶ್ವನಾಥ ಬಲ್ಲಿದವ್ ತಿಳಿಸಿದರು. ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸೆ.9ರಂದು ಇಡಿ ಶೋಧ ನಡೆಸಿರುವುದು ವರದಿಯಾಗಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದುರುದ್ದೇಶದಿಂದ ಸತೀಶ್ ಜಾರಕಿಹೊಳಿ ಅವರನ್ನು ಗುರಿಯಾಗಿಸಿಕೊಂಡು ಇಡಿ ಮೂಲಕ ದಾಳಿ ನಡೆಸಿದೆ ಎಂದು ಆರೋಪಿಸಿದರು.
ಸತೀಶ್ ಜಾರಕಿಹೊಳಿ ಅವರು ಕೇವಲ ರಾಜಕಾರಣಿಯಾಗಿರದೆ, ಮೂಢನಂಬಿಕೆಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಪ್ರಗತಿಪರ ಚಿಂತಕರಾಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣನವರ ತತ್ವಗಳನ್ನು ಅನುಸರಿಸಿಕೊಂಡು ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜಕೀಯವಾಗಿ ಪ್ರಭಾವಿ ನಾಯಕರಾಗಿ ಬೆಳೆಯುತ್ತಿರುವ ಸತೀಶ್ ಜಾರಕಿಹೊಳಿ ಅವರ ಜನಪ್ರಿಯತೆಯನ್ನು ಕುಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ ಮುಖಂಡರು, ದೀನದಲಿತರು ಹಾಗೂ ಶೋಷಿತ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಸಕಲ ಸಮುದಾಯಗಳ ಏಳಿಗೆಗಾಗಿ ದುಡಿಯುತ್ತಿರುವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲಿನ ಇಡಿ ಕಾರ್ಯಾಚರಣೆಯನ್ನು ಸಂವಿಧಾನ ಸಂರಕ್ಷಣಾ ಸಮಿತಿ ಖಂಡಿಸುತ್ತದೆ. ಸೆ.29ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಪ್ರಗತಿಪರ ಚಿಂತಕರು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಪ್ರಗತಿಪರರು ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಮೋಹನ್ ಬಲ್ಲಿದವ್, ಮಾನಶಯ್ಯ ನಾಯಕ, ಶಬ್ಬೀರ್ ಬೂವಾಜಿ, ಬಾಬು ಗೌರಂಪೇಟ್, ಬಾಬು ಕವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.



