ರಾಯಚೂರು, ನ. 1: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಸಾಮಾಜಿಕ ನ್ಯಾಯ ಸಭೆ’ ಆಯೋಜಿಸಲಾಗಿದೆ.

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಠಾಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಸಭೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪಿ. ಹರಿಶೇಖರನ್ ಐಪಿಎಸ್ ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ನವೆಂಬರ್ 2ರಂದು ರಾಯಚೂರು ಜಿಲ್ಲೆಗೆ ಭೇಟಿ ನೀಡಲಿರುವ ಎಡಿಜಿಪಿ ಪಿ. ಹರಿಶೇಖರನ್ ಅವರು ನಗರದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಠಾಣೆಗೆ ಭೇಟಿ ನೀಡಿ, ಠಾಣೆಯ ಕಾರ್ಯನಿರ್ವಹಣೆ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಪರಿಶೀಲಿಸಲಿದ್ದಾರೆ.

ನವೆಂಬರ್ 3ರಂದು ನಡೆಯುವ ಸಾಮಾಜಿಕ ನ್ಯಾಯ ಸಭೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ನೊಂದವರು, ಸಾರ್ವಜನಿಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿ ತಮ್ಮ ಸಮಸ್ಯೆಗಳು, ದೂರುಗಳು ಮತ್ತು ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಸಭೆಯ ನಂತರ ಮಧ್ಯಾಹ್ನ 1 ಗಂಟೆಗೆ ಎಡಿಜಿಪಿ ಪಿ. ಹರಿಶೇಖರನ್ ಅವರು ಮಾಧ್ಯಮಗೋಷ್ಠಿ ನಡೆಸಲಿದ್ದಾರೆ.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಯಚೂರು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಉಪಾಧೀಕ್ಷಕ ರಾಜಕುಮಾರ ವಾಜಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.