ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 188 ದಿನಗಳ ಕಾಲ ವಿಚಾರಣೆ ನಡೆಸಿ 3,694 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಮಾಹಿತಿ ಒದಗಿಸುವಲ್ಲಿ ವಿಳಂಬ ಹಾಗೂ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 80 ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಒಟ್ಟು ₹7.78 ಲಕ್ಷ ದಂಡ ವಿಧಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ತಿಳಿಸಿದರು.

ಅಕ್ಟೋಬರ್ 16ರಂದು ಕಲಬುರಗಿ ಪೀಠದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಒಂದು ವರ್ಷದ ಅಧಿಕಾರಾವಧಿಯ ಕಾರ್ಯನಿರ್ವಹಣೆಯ ವಿವರಗಳನ್ನು ನೀಡಿದ ಅವರು, ಸಾರ್ವಜನಿಕರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅಗತ್ಯ ಮಾಹಿತಿ ದೊರಕಿಸಿಕೊಡುವುದು ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿರುವ ಮೇಲ್ಮನವಿ ಪ್ರಕರಣಗಳಿಗೆ ನ್ಯಾಯಯುತ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದರು.

2025ರ ನವೆಂಬರ್ 25ರಿಂದ ಪ್ರಕರಣಗಳ ವಿಚಾರಣೆ ಆರಂಭಿಸಲಾಗಿದ್ದು, ಈವರೆಗೆ 188 ದಿನಗಳ ವಿಚಾರಣೆಯಲ್ಲಿ ಒಟ್ಟು 7,262 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ 3,694 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಿಗದಿತ ಅವಧಿಯಲ್ಲಿ ಅರ್ಜಿದಾರರಿಗೆ ಮಾಹಿತಿ ಒದಗಿಸಲು ವಿಫಲರಾದ ವಿವಿಧ ಇಲಾಖೆಗಳ 80 ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ₹7,78,000 ದಂಡ ವಿಧಿಸಿದ್ದು, ಅದರಲ್ಲಿ ₹7,37,000 ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು.

ಮಾಹಿತಿ ಪಡೆಯಲು ಅರ್ಜಿ ಸಲ್ಲಿಸಿದರೂ ಸಕಾಲಕ್ಕೆ ಉತ್ತರ ದೊರೆಯದ ಕಾರಣ ಸಮಯ ಹಾಗೂ ಹಣ ವ್ಯರ್ಥ ಮಾಡಿಕೊಂಡ 35 ಮೇಲ್ಮನವಿದಾರರಿಗೆ ಒಟ್ಟು ₹96,000 ಪರಿಹಾರ ನೀಡುವಂತೆ ಆಯೋಗ ಆದೇಶಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅಧಿಕಾರಿಗಳ ಕಾನೂನುಬದ್ಧ ಕರ್ತವ್ಯವಾಗಿದ್ದು, ಈ ಜವಾಬ್ದಾರಿಯನ್ನು ನಿರ್ಲಕ್ಷಿಸುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಲಬುರಗಿ ಪೀಠದ ವ್ಯಾಪ್ತಿಯಲ್ಲಿ ಈವರೆಗೆ ಒಟ್ಟು 20,398 ದ್ವಿತೀಯ ಮೇಲ್ಮನವಿ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 13,468 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಸ್ತುತ 6,930 ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ. ಹಿಂದೆ ದ್ವಿತೀಯ ಮೇಲ್ಮನವಿ ಸಲ್ಲಿಸಲು ಬೆಂಗಳೂರಿಗೆ ತೆರಳಬೇಕಾಗಿತ್ತು. ಆದರೆ 2026ರ ಫೆಬ್ರವರಿಯಿಂದ ಕಲಬುರಗಿ ಪೀಠದಲ್ಲಿಯೇ ಅರ್ಜಿಗಳನ್ನು ಸ್ವೀಕರಿಸುವ ವ್ಯವಸ್ಥೆ ಆರಂಭಿಸಲಾಗಿದ್ದು, ಇಲ್ಲಿಯವರೆಗೆ 2,432 ದ್ವಿತೀಯ ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು.

ಜಿಲ್ಲಾವಾರು ಬಾಕಿ ಪ್ರಕರಣಗಳ ವಿವರ ನೀಡಿದ ಅವರು, ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು 2,059 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಕಲಬುರಗಿಯಲ್ಲಿ 1,483, ಬಳ್ಳಾರಿಯಲ್ಲಿ 885, ಯಾದಗಿರಿಯಲ್ಲಿ 665, ಕೊಪ್ಪಳದಲ್ಲಿ 649, ವಿಜಯನಗರದಲ್ಲಿ 629 ಹಾಗೂ ಬೀದರ್ ಜಿಲ್ಲೆಯಲ್ಲಿ 560 ಪ್ರಕರಣಗಳು ಸೇರಿದಂತೆ ಒಟ್ಟು 6,930 ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.

ತಾವು ಅಧಿಕಾರ ವಹಿಸಿಕೊಂಡ ನಂತರ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಮಾಹಿತಿ ಹಕ್ಕು ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಂಡು ಅರ್ಜಿದಾರರಿಗೆ ಮಾಹಿತಿ ಲಭ್ಯವಾಗುವಂತೆ ಕ್ರಮವಹಿಸಲಾಗಿದೆ. ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಗಳ ಅಧಿಕಾರಿಗಳಿಗೆ ಕಾಯ್ದೆಯ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ ಗೊಂದಲಗಳನ್ನು ನಿವಾರಿಸಲು ಕಲಬುರಗಿ ಪೀಠದ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 2024ರಲ್ಲಿ ಕಲಬುರಗಿ ಪೀಠ ಕಾರ್ಯಾರಂಭ ಮಾಡಿದೆ. ಪ್ರಸ್ತುತ ಲೋಕೋಪಯೋಗಿ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಆಯೋಗದ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಪೀಠಕ್ಕೆ ಶಾಶ್ವತ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಮಂಜೂರು ಮಾಡುವಂತೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಈ ಸಂಬಂಧ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಆಯೋಗದ ಕಾರ್ಯನಿರ್ವಹಣೆಗೆ ಅಗತ್ಯ ಸಿಬ್ಬಂದಿಯ ಕೊರತೆಯಿದ್ದು, ಹೆಚ್ಚುವರಿ ಸಿಬ್ಬಂದಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯ ಮಾನವ ಸಂಪನ್ಮೂಲ ಲಭ್ಯವಾದಲ್ಲಿ ಹೆಚ್ಚಿನ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡು ಶೀಘ್ರ ವಿಲೇವಾರಿ ಮಾಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಳೆದ ವರ್ಷದ ಅವಧಿಯಲ್ಲಿ ಹಲವು ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲಾಗಿದೆ. ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ಗೆ ಸಂಬಂಧಿಸಿದ ಮೇಲ್ಮನವಿಯ ವಿಚಾರಣೆ ನಡೆಸಿ, ಸದರಿ ಬ್ಯಾಂಕ್ ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಆಯೋಗ ಆದೇಶಿಸಿರುವುದು ಪ್ರಮುಖ ಬೆಳವಣಿಗೆಯಾಗಿದೆ. ಅಲ್ಲದೆ, 2010ರಿಂದ 2022ರ ಅವಧಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿದ್ದ 500ಕ್ಕೂ ಹೆಚ್ಚು ಹಳೆಯ ಪ್ರಕರಣಗಳನ್ನು ವಿಚಾರಣೆ ನಡೆಸಿ ವಿಲೇವಾರಿ ಮಾಡಲಾಗಿದೆ ಎಂದು ವಿವರಿಸಿದರು.

ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳ ಮಾಹಿತಿ ನೀಡುವಲ್ಲಿ ವಿಳಂಬ ಮಾಡಿದ ಪ್ರಕರಣದ ಕುರಿತು ಮಾತನಾಡಿದ ಅವರು, ಅರ್ಜಿದಾರರು ಕೋರಿದ್ದ ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ಒದಗಿಸದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಮೂವರು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಿಗೆ ತಲಾ ₹25 ಸಾವಿರದಂತೆ ಒಟ್ಟು ₹75 ಸಾವಿರ ದಂಡ ವಿಧಿಸಿ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಮೂವರು ಪಿಎಸ್‌ಐಗಳ ವಿರುದ್ಧ ಇಲಾಖಾ ಕ್ರಮಕ್ಕೆ ಆಯೋಗ ಶಿಫಾರಸು ಮಾಡಿದ್ದು, ಅದರಂತೆ ಪೊಲೀಸ್ ನಿಯಮಗಳ ರೂಲ್ 7ರ ಅಡಿಯಲ್ಲಿ ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಗಳು ನೋಟಿಸ್ ಜಾರಿಗೊಳಿಸಿರುವುದಾಗಿ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ಇದಲ್ಲದೆ, ಕೆಲವು ಮೇಲ್ಮನವಿ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆ ಅಗತ್ಯವೆಂದು ಕಂಡುಬಂದ ಹಿನ್ನೆಲೆಯಲ್ಲಿ ಆಯೋಗಕ್ಕೆ ಇರುವ ಅಧಿಕಾರವನ್ನು ಬಳಸಿಕೊಂಡು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ ವಿಚಾರಣಾ ವರದಿ ಕೇಳಲಾಗಿದೆ. ವರದಿಗಳು ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಎರಡು ಮಹತ್ವದ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ಆದೇಶ ಹೊರಡಿಸಿದ ಬಳಿಕ ಅವುಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಬಿ. ವೆಂಕಟಸಿಂಗ್ ತಿಳಿಸಿದರು.