ರಾಯಚೂರು: 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ 9ನೇ ತರಗತಿ ವಿದ್ಯಾರ್ಥಿನಿ ರೇಣುಕಾ ಸಾಬಣ್ಣ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯಾಗಿರುವ ರೇಣುಕಾ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಮೊದಲ ಸ್ಥಾನ ಪಡೆದು ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಗೆ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಯನ್ನು ಗುರುತಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೊಸಗಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಂಗಸ್ವಾಮಿ, ಇಸಿಒ ರಾಮಕೃಷ್ಣ, ಶಿಕ್ಷಕ ವೀರಭದ್ರಪ್ಪ ಕೆ. ಹಾಗೂ ತರಬೇತುದಾರ ಆನಂದ್ ಅಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯಗುರುಗಳು, ಶಿಕ್ಷಕರು, ಗ್ರಾಮದ ಯುವಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ರೇಣುಕಾ ಉತ್ತಮ ಪ್ರದರ್ಶನ ನೀಡಿ ಹೆಚ್ಚಿನ ಸಾಧನೆ ಮಾಡಲಿ ಎಂದು ಶಿಕ್ಷಕರು ಹಾಗೂ ಗಣ್ಯರು ಶುಭ ಹಾರೈಸಿದರು.