ರಾಯಚೂರು: ಗ್ರಾಮೀಣ ಭಾಗದ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಗುಸ್ಮಾ ಒಕ್ಕೂಟದ ವ್ಯಾಪ್ತಿಯ 40 ಶಾಲೆಗಳಿಗೆ ಬೋರ್‌ವೆಲ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭರವಸೆ ನೀಡಿದರು.

ಗುಸ್ಮಾ ಗ್ರಾಮೀಣ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ (ರಿ.) ಮಂಚಲಾಪುರ, ರಾಯಚೂರು ತಾಲೂಕು ಹಾಗೂ ಎಂಕೆಟಿ ಶಾಲೆ ಚಂದ್ರಬಂಡಾ ಇವರ ಸಂಯುಕ್ತಾಶ್ರಯದಲ್ಲಿ ಸೆ.18ರಂದು ಚಂದ್ರಬಂಡಾ ಗ್ರಾಮದ ಎಂಕೆಟಿ ಶಾಲೆಯಲ್ಲಿ ಆಯೋಜಿಸಿದ್ದ ಗುಸ್ಮಾ ಒಕ್ಕೂಟದ ದಶಮಾನೋತ್ಸವ ಹಾಗೂ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸೇವೆ ಸಲ್ಲಿಸುತ್ತಿರುವ ಖಾಸಗಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯುವಂತೆ ಒಕ್ಕೂಟದ ವ್ಯಾಪ್ತಿಯ 40 ಶಾಲೆಗಳಿಗೆ ಬೋರ್‌ವೆಲ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಲ್ಪಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ‘ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ವಿವಿಧ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಹಾಗೂ ಚಂದ್ರಬಂಡಾ ಗ್ರಾಮದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ದಶಮಾನೋತ್ಸವದ ಅಂಗವಾಗಿ ಗ್ರಾಮದ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು. ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ನಡೆಸಲಾಯಿತು. ಸರ್ಕಾರಿ ಆಸ್ಪತ್ರೆಯ ವತಿಯಿಂದ ರಕ್ತದೊತ್ತಡ (ಬಿಪಿ) ಹಾಗೂ ಮಧುಮೇಹ (ಶುಗರ್) ತಪಾಸಣೆ ನಡೆಸಿ ಸಾರ್ವಜನಿಕರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ರವಿಕುಮಾರ್ ಗೋನಾಳ್ ಮಂಚಲಾಪುರ, ನೂತನ ಅಧ್ಯಕ್ಷ ರವಿಭೂಷಣ್, ಕಾರ್ಯದರ್ಶಿ ಡಿ. ರಾಜೇಶ್ ಯಾದವ್ ಬಿಜನಗೇರಾ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಯಾಪಲದಿನ್ನಿಯ ಜ್ಞಾನಜ್ಯೋತಿ ಶಾಲೆಯ ಶಿಕ್ಷಕಿ ಸೋನಿ ಹಾಗೂ ಡಿ.ಕೆ. ರವಿ ದೇವನಪಲ್ಲಿ ಕಾರ್ಯಕ್ರಮ ನಿರೂಪಿಸಿದರು. ಕಲ್ಯಾಣ್ ಗೋನಾಳ್ ಪ್ರಾರ್ಥನಾ ಗೀತೆಗಳನ್ನು ಪ್ರಸ್ತುತಪಡಿಸಿದರೆ, ದೀಪ್ತಿಶ್ರೀ ಸ್ವಾಗತ ನೃತ್ಯ ಪ್ರದರ್ಶಿಸಿದರು.