ಬೆಂಗಳೂರು: ಮುಂಬರುವ ಡಿಸೆಂಬರ್ ತಿಂಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಎಂ. ವೆಂಕಟೇಶಯ್ಯ ಅವರನ್ನು ಭೇಟಿ ಮಾಡಿ ಸಮ್ಮೇಳನದ ಕುರಿತು ಚರ್ಚಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಡಾ.ಎಂ. ವೆಂಕಟೇಶಯ್ಯ ಅವರನ್ನು ಭೇಟಿ ಮಾಡಿ, ರಾಯಚೂರಿನಲ್ಲಿ ಆಯೋಜಿಸಲಾಗುತ್ತಿರುವ ಸಮ್ಮೇಳನದ ಸಿದ್ಧತೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಮಾಹಿತಿ ನೀಡಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಭಾಗವಹಿಸಲಿರುವ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ನಿಯೋಗದಲ್ಲಿ ರಾಯಚೂರು ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ, ಸಮಿತಿ ಸದಸ್ಯರಾದ ಪ್ರಸನ್ನ ಕುಮಾರ ಜೈನ್, ಲಕ್ಷ್ಮಣ ಕಪಗಲ್, ಸದಸ್ಯ ಗುರುಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



