ರಾಯಚೂರು: ನಗರದ ಗೌಳಿ ಸಮಾಜದ ವತಿಯಿಂದ ಆಯೋಜಿಸಲಾಗಿರುವ 44ನೇ ವರ್ಷದ ನವರಾತ್ರಿ ಉತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಸಂಜೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್. ಅವರು ಪಾಲ್ಗೊಂಡರು.

ಪ್ರತಿವರ್ಷ ನವರಾತ್ರಿ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬರುತ್ತಿರುವ ಗೌಳಿ ಸಮಾಜವು ಈ ಬಾರಿಯೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಉತ್ಸವದ ಅಂಗವಾಗಿ ಭಾನುವಾರ ನವಕನ್ಯಾ ಪೂಜೆ ಹಾಗೂ ಪಲ್ಲಕ್ಕಿ ಸೇವೆಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಉತ್ಸವಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಪಿವಿತಾ ಎಸ್. ಅವರು ನವಕನ್ಯಾ ಪೂಜೆ ಹಾಗೂ ಪಲ್ಲಕ್ಕಿ ಸೇವೆಯಲ್ಲಿ ಭಾಗವಹಿಸಿ ಧಾರ್ಮಿಕ ಆಚರಣೆಗಳಿಗೆ ಸಾಕ್ಷಿಯಾದರು.

ಗೌಳಿ ಸಮಾಜದ ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ನಂಬಿಕೆ ಹಾಗೂ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿವರ್ಷ ನಡೆಯುತ್ತಿರುವ ನವರಾತ್ರಿ ಉತ್ಸವವು ಈ ಬಾರಿ 44ನೇ ವರ್ಷಕ್ಕೆ ಕಾಲಿಟ್ಟಿದ್ದು, ಸಮಾಜದ ಒಗ್ಗಟ್ಟು ಮತ್ತು ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಗಮನ ಸೆಳೆಯುತ್ತಿದೆ.