ಮಾನ್ವಿ: ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಸರ್ಕಾರದ ವತಿಯಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.

ಹರನಹಳ್ಳಿ ಗ್ರಾಮದಲ್ಲಿರುವ ಮೃತ ರೈತ ಪ್ರಭಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅನಿರೀಕ್ಷಿತವಾಗಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಸರ್ಕಾರದಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ಅನ್ನು ಮೃತ ರೈತನ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದ ಅವರು, ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸರ್ಕಾರದ ವತಿಯಿಂದ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.

ಇದೇ ಘಟನೆಯಲ್ಲಿ ಸಿಡಿಲು ಬಡಿದು ಗಾಯಗೊಂಡಿರುವ ನಾಲ್ವರ ಆರೋಗ್ಯದ ಬಗ್ಗೆಯೂ ವಿಚಾರಿಸಿದ ಶಾಸಕರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ಕಂದಾಯ ನಿರೀಕ್ಷಕ ಹನುಮಂತಪ್ಪ ಜಲ್ಲಿ, ಮುಖಂಡ ಮೌನೇಶ ನಾಯಕ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.