ಲಿಂಗಸುಗೂರು: ಪಟ್ಟಣದ ಶ್ರೀ ತುಳಜಾ ಭವಾನಿ ಮಂದಿರದ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೋಮವಂಶ ಆರ್ಯ ಕ್ಷತ್ರಿಯ ಸಮಾಜದ ಸಮುದಾಯ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಲು ₹50 ಲಕ್ಷ ವಿಶೇಷ ಅನುದಾನ ಮಂಜೂರು ಮಾಡುವಂತೆ ಸಮಾಜದ ಪದಾಧಿಕಾರಿಗಳು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಅಜಯ ಧರ್ಮಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿರುವ ಸಚಿವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸೋಮವಂಶ ಆರ್ಯ ಕ್ಷತ್ರಿಯ ಸಮಾಜದ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. ಬಳಿಕ ಸಮುದಾಯ ಭವನದ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು.

ಸಮಾಜದ ಸಭೆ-ಸಮಾರಂಭಗಳು, ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಮುದಾಯ ಭವನ ಅಗತ್ಯವಾಗಿದ್ದು, ಕಟ್ಟಡವನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ₹50 ಲಕ್ಷ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಪತ್ರದ ಮೂಲಕ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸೋಮವಂಶ ಆರ್ಯ ಕ್ಷತ್ರಿಯ ಸಮಾಜದ ಲಿಂಗಸುಗೂರು ತಾಲೂಕು ಅಧ್ಯಕ್ಷ ದಶರಥರಾವ್ ಮಿರಜಕರ, ಆನಂದ ಚವ್ಹಾಣ, ಗೌತಮ್ ಕುಮಾರ್, ರಾಘವೇಂದ್ರ, ರಾಜಶೇಖರ್, ಸತ್ಯನಾರಾಯಣ ಸಿಂಗ್, ಬಾಬು ಸಿಂಗ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.