ರಾಯಚೂರು: ಬರಗಾಲ, ಬೆಳೆ ಹಾನಿ, ನೀರಾವರಿ ಸಮಸ್ಯೆ ಹಾಗೂ ಸಾಲದ ಹೊರೆಯಿಂದ ತತ್ತರಿಸಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು. ಕೃಷಿ ಕಾರ್ಮಿಕರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವುದರ ಜೊತೆಗೆ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಸೇನಾ ಕರ್ನಾಟಕದ ರಾಯಚೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಗಾರ್ಡನ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು, ರೈತರು ಮತ್ತು ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆಯುವಂತೆ ಕೋರಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ ಕರ್ನಾಟಕದ ಜಿಲ್ಲಾಧ್ಯಕ್ಷ ರಾಜಾಚಂದ್ರ ರಾಮನಗೌಡ, ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಜಿಲ್ಲೆಯ ಸಾವಿರಾರು ಕುಟುಂಬಗಳು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಒಂದೆಡೆ ಮಳೆಯ ಅಭಾವದಿಂದ ಬೆಳೆಗಳು ಹಾನಿಗೊಳಗಾಗುತ್ತಿದ್ದರೆ, ಮತ್ತೊಂದೆಡೆ ನೀರಾವರಿ ಸೌಲಭ್ಯಗಳ ಕೊರತೆ ಮತ್ತು ವಿದ್ಯುತ್ ಸಮಸ್ಯೆಯಿಂದ ರೈತರು ನಿರೀಕ್ಷಿತ ಇಳುವರಿ ಪಡೆಯಲು ಸಾಧ್ಯವಾಗುತ್ತಿಲ್ಲ. ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಬೆಲೆಯೂ ಸಿಗದಿರುವುದು ರೈತರ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬೆಳೆ ನಷ್ಟ ಅನುಭವಿಸಿರುವ ರೈತರ ಜಮೀನುಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ವೈಜ್ಞಾನಿಕ ಸಮೀಕ್ಷೆ ಕೈಗೊಳ್ಳಬೇಕು. ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ಎಕರೆಗೆ ₹50 ಸಾವಿರದವರೆಗೆ ಪರಿಹಾರ ಘೋಷಿಸಬೇಕು. ಸಾಲದ ಸುಳಿಗೆ ಸಿಲುಕಿರುವ ಅರ್ಹ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಬೆಳೆ ವಿಮೆ ಪರಿಹಾರ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ರೈತರಿಗೆ ಬರಬೇಕಾದ ಬಾಕಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಯಚೂರು ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ತುಂಗಭದ್ರಾ ಎಡದಂಡೆ ಮತ್ತು ನಾರಾಯಣಪುರ ಬಲದಂಡೆ ಕಾಲುವೆಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು. ಮುಖ್ಯ ಕಾಲುವೆಗಳ ಜೊತೆಗೆ ವಿತರಣಾ ಕಾಲುವೆಗಳು ಹಾಗೂ ಉಪಕಾಲುವೆಗಳ ಕೊನೆಯ ಭಾಗದ ಜಮೀನುಗಳಿಗೂ ನೀರು ತಲುಪುವಂತೆ ವ್ಯವಸ್ಥೆ ಮಾಡಬೇಕು. ನೀರಿನ ಹರಿವಿಗೆ ಅಡ್ಡಿಯಾಗಿರುವ ಹೂಳು ತೆರವುಗೊಳಿಸಿ, ಹಾನಿಗೊಂಡ ಕಾಲುವೆಗಳನ್ನು ದುರಸ್ತಿಪಡಿಸಬೇಕು. ನೀರು ಪೋಲಾಗುವುದನ್ನು ತಡೆಯಲು ಅಗತ್ಯ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಸಿಗದಿರುವುದರಿಂದ ನೀರಾವರಿ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಹೀಗಾಗಿ ಪ್ರತಿದಿನ ಕನಿಷ್ಠ 12 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು. ಕೃಷಿ ಋತುವಿನಲ್ಲಿ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಪರಿಕರಗಳ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುವ ಭತ್ತ, ಹತ್ತಿ, ಜೋಳ, ತೊಗರಿ ಹಾಗೂ ಮೆಣಸಿನಕಾಯಿ ಬೆಳೆಗಳಿಗೆ ರೈತರಿಗೆ ಲಾಭದಾಯಕವಾಗುವ ರೀತಿಯಲ್ಲಿ ನ್ಯಾಯಯುತ ದರ ದೊರೆಯಬೇಕು. ಕೃಷಿ ಉತ್ಪನ್ನಗಳ ಖರೀದಿ ವ್ಯವಸ್ಥೆಯನ್ನು ಬಲಪಡಿಸಿ, ಸರ್ಕಾರಿ ಖರೀದಿ ಕೇಂದ್ರಗಳಲ್ಲಿ ಬೆಳೆ ಮಾರಾಟ ಮಾಡಿರುವ ರೈತರಿಗೆ ಪಾವತಿಸಬೇಕಾದ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕೆಲಸಗಳ ಕೊರತೆಯಿಂದ ಕೂಲಿಕಾರರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಬರಪೀಡಿತ ಗ್ರಾಮಗಳಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಬೇಕು. ಕಾರ್ಮಿಕರಿಗೆ ಕೆಲಸದ ಜೊತೆಗೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದ ಅರ್ಹ ಕೃಷಿ ಕಾರ್ಮಿಕ ಕುಟುಂಬಗಳಿಗೆ ಉಚಿತ ಪಡಿತರ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.
ಬರದ ಪರಿಣಾಮ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಗ್ರಾಮಗಳಲ್ಲಿ ಗೋಶಾಲೆ ಮತ್ತು ಮೇವು ವಿತರಣಾ ಕೇಂದ್ರಗಳನ್ನು ಸ್ಥಾಪಿಸಬೇಕು. ಪಶುಗಳಿಗೆ ಶುದ್ಧ ಕುಡಿಯುವ ನೀರು ಹಾಗೂ ತುರ್ತು ಪಶುವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕು. ಜಾನುವಾರುಗಳ ಸಂರಕ್ಷಣೆಯನ್ನೂ ಸರ್ಕಾರ ಆದ್ಯತೆಯ ವಿಷಯವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ರೈತರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡುವುದರಿಂದ ಪರಿಹಾರ ಸಿಗುವುದಿಲ್ಲ. ಜಿಲ್ಲಾಧಿಕಾರಿಗಳು ಕೃಷಿ, ನೀರಾವರಿ, ವಿದ್ಯುತ್, ಪಶುಸಂಗೋಪನೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಬೇಕು. ರೈತ ಸಂಘಟನೆಗಳ ಪ್ರತಿನಿಧಿಗಳ ಅಭಿಪ್ರಾಯ ಪಡೆದು ಪ್ರತಿಯೊಂದು ಬೇಡಿಕೆಯ ಈಡೇರಿಕೆಗೆ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಬೇಕು ಎಂದು ರಾಜಾಚಂದ್ರ ರಾಮನಗೌಡ ಒತ್ತಾಯಿಸಿದರು.
ಸರ್ಕಾರ ಮತ್ತು ಜಿಲ್ಲಾಡಳಿತ ರೈತರು ಹಾಗೂ ಕೃಷಿ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ವಿಸ್ತರಿಸಲಾಗುವುದು. ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಿವಸೇನಾ ಕರ್ನಾಟಕದ ಗ್ರಾಮಾಂತರ ಅಧ್ಯಕ್ಷ ಸಂತೋಷ್ ಗೌಡ ಗುಡಿ, ಪ್ರಭು ಮಡಿವಾಳ, ರಾಮು, ಅಮೀನ ರೆಡ್ಡಿ ಗೌಡ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ರೈತರು, ಕೃಷಿ ಕಾರ್ಮಿಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



