ರಾಯಚೂರು: ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.
ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಹಿರಿಯ ಉಪಾಧ್ಯಕ್ಷ ಕುಂಟ್ನಾಳ್ ವೆಂಕಟೇಶ ಅವರ ನೇತೃತ್ವದಲ್ಲಿ ಮಹಾಸಭಾದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್ ಅವರಿಗೆ ಮನವಿ ಸಲ್ಲಿಸಿದರು.
ಎಲ್ಬಿಎಸ್ ನಗರದಲ್ಲಿ ಹೋಟೆಲ್ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯಿಂದ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬವು ಆಧಾರಸ್ತಂಭವನ್ನು ಕಳೆದುಕೊಂಡು ಅತಂತ್ರ ಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಘೋಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹತ್ಯೆ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ಆರೋಪಿಗೆ ಕಾನೂನಿನಡಿ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಆರೋಪಿಯ ಕುಟುಂಬದವರು ಅಥವಾ ಇತರರಿಂದ ಮೃತರ ಕುಟುಂಬದ ಸದಸ್ಯರಿಗೆ ಯಾವುದೇ ರೀತಿಯ ಒತ್ತಡ, ಬೆದರಿಕೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳ ನಾಶ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೆ, ಕೊಲೆ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆಯಲ್ಲಿ ವಿಶೇಷ ಅನುಭವ ಹೊಂದಿರುವ ತಜ್ಞ ವಕೀಲರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಬೇಕು. ಇದರಿಂದ ಪ್ರಕರಣದ ವಿಚಾರಣೆ ಪರಿಣಾಮಕಾರಿಯಾಗಿ ನಡೆದು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಲು ಅನುಕೂಲವಾಗಲಿದೆ ಎಂದು ಮಹಾಸಭಾದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮೊದಲು ನಗರದ ರಾಯಚೂರು ಹಬ್ನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ನರಸಿಂಹ ಶೆಟ್ಟಿ ಅವರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಮುಖಂಡರು, ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಮಹಾಸಭಾದ ಹಿರಿಯ ಉಪಾಧ್ಯಕ್ಷ ಕುಂಟ್ನಾಳ್ ವೆಂಕಟೇಶ ಅವರ ನೇತೃತ್ವದಲ್ಲಿ ಜಿಲ್ಲೆಯ ನಿರ್ದೇಶಕರು ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಎಲ್ಬಿಎಸ್ ನಗರದಲ್ಲಿರುವ ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ದುಃಖದ ಸಂದರ್ಭದಲ್ಲಿ ಸಮಾಜವು ಕುಟುಂಬದೊಂದಿಗೆ ನಿಲ್ಲಲಿದೆ ಎಂದು ಧೈರ್ಯ ತುಂಬಿದರು.
ಕರ್ನಾಟಕ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್ ಅವರು ಮೃತರ ಕುಟುಂಬದ ಸದಸ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಾಂತ್ವನ ಹೇಳಿದರು. ಈ ಘಟನೆಯಿಂದ ಧೃತಿಗೆಡಬಾರದು. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಸಮಾಜವು ಸದಾ ಕುಟುಂಬದ ಬೆಂಬಲಕ್ಕೆ ನಿಲ್ಲಲಿದ್ದು, ಅಗತ್ಯ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಐ ಉಮೇಶ್ ಕಾಂಬ್ಳೆ, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ಭೀಮಾಶಂಕರ್, ಮಹಾಸಭಾದ ನಿರ್ದೇಶಕರಾದ ಜಗದೀಶ್ ಗುಪ್ತ, ದೇವನಪಲ್ಲಿ ವಾಸುದೇವ್, ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಕೇಶ್ ರಾಜಲಬಂಡಿ, ನಿರ್ದೇಶಕರಾದ ಕೆ.ಸಿ. ವೀರೇಶ್ ವಕೀಲರು, ಮೈಲಾಪುರ ಎನ್. ಮೂರ್ತಿ, ಭವಾನಿ ವೀರೇಶ್, ಆನಂದ್ ಗುರುಗುಂಟಾ, ವಿಜ್ಞಾನ ವೆಂಕಟೇಶ, ಎಂ.ಆರ್. ಹನುಮಂತಯ್ಯ ಶೆಟ್ಟಿ, ತಿಮ್ಮಯ್ಯ ಶೆಟ್ಟಿ ಇಲ್ಲೂರು, ಅಣ್ಣ ಶ್ರೀಕಾಂತ, ವಿಕ್ರಂ ಬಾಪೂರು, ಪೆಂಡಾಲ್ ಕಿಶೋರ್, ಕಟ್ಟಾ ರಾಘವೇಂದ್ರ ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



