ರಾಯಚೂರು, ನ. 2: ವಿದ್ಯಾರ್ಥಿಗಳಿಗೆ ಗ್ರಾಮೀಣ ಜನಜೀವನ, ಸಂಸ್ಕೃತಿ, ಸಂಪ್ರದಾಯ ಹಾಗೂ ಹಳ್ಳಿಗಳ ಸಾಮಾಜಿಕ ಪರಿಸರದ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಚಾಲನೆ ನೀಡಿದರು.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆಗಿರುವ ಡಾ. ಅಜಯ್ ಧರ್ಮಸಿಂಗ್ ಅವರು ವಿದ್ಯಾರ್ಥಿಗಳನ್ನು ಹೊತ್ತ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಗ್ರಾಮಾನುಭವ ಪ್ರವಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಗರದ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್), ಪಿಎಂಶ್ರೀ ಶಾಲೆ ಸೇರಿದಂತೆ ಮೂರು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಒಟ್ಟು 11 ಬಸ್‌ಗಳಲ್ಲಿ 550 ವಿದ್ಯಾರ್ಥಿಗಳು ಹಾಗೂ ಐವರು ಮಾರ್ಗದರ್ಶಕ ಶಿಕ್ಷಕರು ಗ್ರಾಮಾನುಭವ ಕಾರ್ಯಕ್ರಮಕ್ಕೆ ತೆರಳಿದರು.

ಪಠ್ಯಪುಸ್ತಕಗಳ ಕಲಿಕೆಗೆ ಸೀಮಿತವಾಗದೆ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳ ನೈಜ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ತಿಳಿದುಕೊಳ್ಳಬೇಕು ಎಂಬುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಜನರ ಜೀವನಶೈಲಿ, ಕೃಷಿ ಚಟುವಟಿಕೆಗಳು, ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳು ಹಾಗೂ ಹಳ್ಳಿಗಳಲ್ಲಿನ ಸಾಮಾಜಿಕ ಬದುಕಿನ ವೈವಿಧ್ಯತೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಅನುಭವ ಒದಗಿಸುವುದರ ಜೊತೆಗೆ ಹಳ್ಳಿಗಳ ಜೀವನ ಪದ್ಧತಿ, ಜನರ ಶ್ರಮ ಹಾಗೂ ಗ್ರಾಮೀಣ ಸಮಾಜದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಕಾರ್ಯಕ್ರಮ ಸಹಕಾರಿಯಾಗಲಿದೆ. ಅನುಭವಾಧಾರಿತ ಕಲಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅರಿವು, ಸಹಬಾಳ್ವೆ ಹಾಗೂ ಗ್ರಾಮೀಣ ಸಂಸ್ಕೃತಿಯ ಬಗ್ಗೆ ಗೌರವ ಬೆಳೆಸುವುದು ಇದರ ಆಶಯವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ಪೋಷಕರು ಉಪಸ್ಥಿತರಿದ್ದರು.