ರಾಯಚೂರು, ನ.11: ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘಿಸಿದ ಪ್ರಕರಣದಲ್ಲಿ ದೇವದುರ್ಗ ಪಟ್ಟಣದ ನಿವಾಸಿಯೊಬ್ಬರಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ದೇವದುರ್ಗದ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಐಪಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವದುರ್ಗ ನಿವಾಸಿ ಅಬೂಬಕರ್ ಸಿದ್ದಿಕಿ, ತಂದೆ ದಾವೂದ್ಸಾಬ್ ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಅಪರಾಧ ಸಂಖ್ಯೆ 418/2023ರ ಅಡಿಯಲ್ಲಿ ಬಾಲ ಕಾರ್ಮಿಕ ಕಾಯ್ದೆಯ ಕಲಂ 3 ಮತ್ತು 14(ಎ) ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ದೇವದುರ್ಗ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಮಹಿಮೂದ್ ಪಾಷಾ ಅವರು ಕೈಗೊಂಡು, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ದೇವದುರ್ಗದ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ದೇವದುರ್ಗದ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರಫೀಕ್ ಅಹಮದ್ ಅವರು, ಸರ್ಕಾರದ ಪರ ಮತ್ತು ಆರೋಪಿಯ ಪರ ಮಂಡಿಸಲಾದ ವಾದ-ಪ್ರತಿವಾದಗಳನ್ನು ಆಲಿಸಿ, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದರು.
ವಿಚಾರಣೆಯಲ್ಲಿ ಆರೋಪಿ ಅಬೂಬಕರ್ ಸಿದ್ದಿಕಿ ಬಾಲ ಕಾರ್ಮಿಕ ಕಾಯ್ದೆಯಡಿ ಅಪರಾಧ ಎಸಗಿರುವುದು ಸಾಬೀತಾಗಿದೆ ಎಂದು ಪರಿಗಣಿಸಿದ ನ್ಯಾಯಾಲಯವು, ಅಕ್ಟೋಬರ್ 3, 2026ರಂದು ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ದೇವದುರ್ಗದ ಸಹಾಯಕ ಸರ್ಕಾರಿ ಅಭಿಯೋಜಕ ಹನುಮೇಶ ನಾಯಕ ವಾದ ಮಂಡಿಸಿದರು.
ದೇವದುರ್ಗ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಶಿವಕುಮಾರ ಅವರು ಇಲಾಖೆಯ ನಿರ್ದೇಶನದಂತೆ ಸಾಕ್ಷಿದಾರರನ್ನು ನಿಗದಿತ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ವಿಚಾರಣಾ ಪ್ರಕ್ರಿಯೆಗೆ ಸಹಕರಿಸಿದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



