ಮಾನ್ವಿ: ಜೋಳ ಖರೀದಿ ಹಣ ಪಾವತಿ, ಕಾಲುವೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ನೀರು, ಬರ ಪರಿಹಾರ, ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.7ರಂದು ಬೆಳಿಗ್ಗೆ 10 ಗಂಟೆಯಿಂದ ಪೋತ್ನಾಳ್ ಹೆದ್ದಾರಿ ಬಂದ್ ಮಾಡಿ ರಸ್ತೆ ತಡೆ ಹಾಗೂ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನಪಾಶ ದಿದ್ದಿಗಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿದ ರೈತರಿಗೆ ಗ್ರೀನ್ ವೋಚರ್ ನೀಡಿದ ಎಂಟು ದಿನಗಳೊಳಗೆ ಹಣವನ್ನು ಖಾತೆಗೆ ಜಮಾ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಜೋಳ ಮಾರಾಟ ಮಾಡಿ ಒಂದು ವರ್ಷ ಕಳೆದರೂ ಹಲವು ರೈತರಿಗೆ ಹಣ ಪಾವತಿಯಾಗಿಲ್ಲ ಎಂದು ಆರೋಪಿಸಿದರು.
ಈ ಹಿಂದೆ ಪೋತ್ನಾಳ್ ಗ್ರಾಮದಲ್ಲಿ ಜೋಳದ ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಸೆ.30ರೊಳಗೆ ರೈತರ ಖಾತೆಗೆ ಹಣ ಜಮಾ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆ ಗಡುವು ಮುಗಿದಿದ್ದರೂ ಹಣ ಪಾವತಿಯಾಗಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಿಂದ ಪ್ರತಿದಿನ ಸುಮಾರು ಒಂದು ಸಾವಿರ ಕ್ಯೂಸೆಕ್ ನೀರನ್ನು ಅನಧಿಕೃತವಾಗಿ ಬಳಸಲಾಗುತ್ತಿದೆ. ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಅಕ್ರಮ ನೀರಾವರಿ ತಡೆಯಲು ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಪರಿಣಾಮ 104 ಮೈಲ್ ಡಿಸ್ಟ್ರಿಬ್ಯೂಟರಿ ಸೇರಿದಂತೆ ಉಪಕಾಲುವೆಗಳ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ ಎಂದು ಆರೋಪಿಸಿದರು.
ಕಾಲುವೆಯ 600 ಮೀಟರ್ ವ್ಯಾಪ್ತಿಯಲ್ಲಿ ಕೆರೆ ನಿರ್ಮಿಸುವಂತಿಲ್ಲ ಎಂಬ ನಿಯಮವಿದ್ದರೂ, ಕೆಲವೆಡೆ ಅನಧಿಕೃತವಾಗಿ ಕೆರೆಗಳನ್ನು ನಿರ್ಮಿಸಿ ಕಾಲುವೆಯಿಂದ ನೀರು ತುಂಬಿಸಿಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ನಿಯಮಾನುಸಾರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ರೈತರ ನಷ್ಟಕ್ಕೆ ಹೋಲಿಸಿದರೆ ಅತ್ಯಲ್ಪವಾಗಿದೆ. ಬೆಳೆ ವಿಮಾ ಕಂಪನಿಗಳ ಅವೈಜ್ಞಾನಿಕ ನಿಯಮಗಳಿಂದ ಬೆಳೆ ನಷ್ಟ ಅನುಭವಿಸಿದ ರೈತರು ಪರಿಹಾರ ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.
ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.7ರಂದು ಸಾವಿರಾರು ರೈತರೊಂದಿಗೆ ಪೋತ್ನಾಳ್ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಅಮೀನಪಾಶ ದಿದ್ದಿಗಿ ತಿಳಿಸಿದರು.
ರೈತ ಮುಖಂಡ ದುರುಗಪ್ಪ ತಡಕಲ್ ಮಾತನಾಡಿ, ಪೋತ್ನಾಳ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಪೋತ್ನಾಳ್ ಹಿರೇಹಳ್ಳಕ್ಕೆ ನೀರು ಹರಿಸಬೇಕು. ಕೃಷಿ ಪಂಪ್ಸೆಟ್ಗಳಿಗೆ ಜೆಸ್ಕಾಂನಿಂದ ನಿರಂತರ ಎಂಟು ತಾಸು ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.
ಬರಗಾಲದಿಂದ ರೈತರ ಆದಾಯಕ್ಕೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಬ್ಯಾಂಕ್ಗಳಲ್ಲಿ ಪಡೆದ ಕೃಷಿ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕು. ಸಾಲ ಮರುಪಾವತಿಸುವಂತೆ ಬ್ಯಾಂಕ್ಗಳು ರೈತರ ಮೇಲೆ ಒತ್ತಡ ಹೇರಬಾರದು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತರಾದ ನಾಗನಗೌಡ ಪೋತ್ನಾಳ್, ಅಮರೇಶ್ ಜೀನೂರು, ವಿಶ್ವನಾಥ್ ಗೌಡ, ಶರಣಪ್ಪ ಹೂಗಾರ್, ಸೋಮನಾಥ್ ಬದರ್ಲಿ, ಶಿವಕುಮಾರ್ ತಡಕಲ್, ಮಹದೇವ್ ತಡಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.



