ಸಿರವಾರ, ನ.5: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕಗಳ ಜ್ಞಾನದ ಜೊತೆಗೆ ಕಂಪ್ಯೂಟರ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿನಿಯರು ತಮಗೆ ದೊರೆತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಹಸೀಲ್ದಾರ್ ಅಶೋಕ ಪವಾರ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಗೆ ಇಂಡಿ ವಿಲೇಜ್ ಫೌಂಡೇಷನ್ ವತಿಯಿಂದ ಕೊಡುಗೆಯಾಗಿ ನೀಡಲಾದ ಏಳು ಲ್ಯಾಪ್ಟಾಪ್ಗಳನ್ನು ವಿತರಿಸಿ, ನೂತನ ಕಂಪ್ಯೂಟರ್ ಪ್ರಯೋಗಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳೆಂದರೆ ಕೆಲವರಲ್ಲಿ ನಿರ್ಲಕ್ಷ್ಯದ ಮನೋಭಾವನೆ ಕಂಡುಬರುತ್ತದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಹಾಗೂ ಕಲಿಕಾ ಸಾಮರ್ಥ್ಯವಿದೆ. ಇಂತಹ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿದಾಗ ಅವರು ಕೂಡ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿ ಲ್ಯಾಪ್ಟಾಪ್ಗಳನ್ನು ಒದಗಿಸಿರುವ ಇಂಡಿ ವಿಲೇಜ್ ಫೌಂಡೇಷನ್ನ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದಿನ ಕಾಲದಲ್ಲಿ ಓದಲು ಮತ್ತು ಬರೆಯಲು ಬಾರದವರನ್ನು ಅನಕ್ಷರಸ್ಥರು ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಇಂದಿನ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಜ್ಞಾನವೂ ಅತ್ಯಂತ ಅಗತ್ಯವಾಗಿದೆ. ಶಿಕ್ಷಣ, ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ದೈನಂದಿನ ಜೀವನದ ಅನೇಕ ಕ್ಷೇತ್ರಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಬಾಲ್ಯದಿಂದಲೇ ಕಂಪ್ಯೂಟರ್ ಕಲಿಕೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.
ಫೌಂಡೇಷನ್ ವತಿಯಿಂದ ಒದಗಿಸಿರುವ ಲ್ಯಾಪ್ಟಾಪ್ಗಳನ್ನು ಕೇವಲ ಶಾಲೆಯ ಆಸ್ತಿಯೆಂದು ಪರಿಗಣಿಸದೆ, ವಿದ್ಯಾರ್ಥಿನಿಯರ ಭವಿಷ್ಯ ರೂಪಿಸುವ ಪ್ರಮುಖ ಶೈಕ್ಷಣಿಕ ಸಾಧನಗಳೆಂದು ಭಾವಿಸಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಅವುಗಳನ್ನು ಬಳಸಿಕೊಂಡು ಕಂಪ್ಯೂಟರ್ನ ಮೂಲಭೂತ ಜ್ಞಾನ, ತಂತ್ರಜ್ಞಾನದ ಬಳಕೆ ಹಾಗೂ ಡಿಜಿಟಲ್ ಕಲಿಕೆಯ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಲ್ಯಾಪ್ಟಾಪ್ಗಳು ಅನೇಕ ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಅವುಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಯನ್ನು ಗುರುತಿಸಿ ವಿದ್ಯಾರ್ಥಿನಿಯರಿಗೆ ಆಧುನಿಕ ತಂತ್ರಜ್ಞಾನದ ಸೌಲಭ್ಯ ಕಲ್ಪಿಸಿರುವ ಇಂಡಿ ವಿಲೇಜ್ ಫೌಂಡೇಷನ್ನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಇಂತಹ ಸಮಾಜಮುಖಿ ಕಾರ್ಯಗಳು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಫಕ್ರುದ್ದೀನ್, ಇಂಡಿ ವಿಲೇಜ್ ಫೌಂಡೇಷನ್ನ ಎನ್ಜಿಒ ಸಂಯೋಜಕಿ ಸುಪ್ರಿಯಾ, ಅನುಷಾ, ಅಮರೇಶ್, ಗಂಗಪ್ಪ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಮಲ್ಲಿಕಾರ್ಜುನ, ಮುಖ್ಯಗುರು ರಾಜಾಸಾಬ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಬಸವರಾಜ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನವೀರಯ್ಯ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಶಕುಂತಲಾ, ನಾಗರತ್ನ, ಲಲಿತಾ, ಶ್ರುತಿ, ಭುವನೇಶ್ವರಿ, ಯಲ್ಲಮ್ಮ, ರಮಾದೇವಿ, ವಿಜಯಲಕ್ಷ್ಮಿ ಹಾಗೂ ಮೌಲಾಸಾಬ್ ಸೇರಿದಂತೆ ಶಾಲೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



