ಜಾಲಹಳ್ಳಿ, ನ. 1: ದೇವದುರ್ಗ ತಾಲೂಕಿನ ಜಾಲಹಳ್ಳಿ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಖುರ್ಶಿದ್ ಪಟೇಲ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಉಲ್ಫೇತುನಿಸ್ಸಾ ಅವರು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷ ಖುರ್ಶಿದ್ ಪಟೇಲ್, ಕನ್ನಡ ಭಾಷೆ ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಅದರ ಉಳಿವು ಹಾಗೂ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯೋತ್ಸವದ ಐತಿಹಾಸಿಕ ಹಿನ್ನೆಲೆ ಹಾಗೂ ಕನ್ನಡ ನಾಡಿನ ಏಕೀಕರಣದ ಮಹತ್ವವನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಅರಿವು ಬೆಳೆಸಿಕೊಳ್ಳಬೇಕು. ಕನ್ನಡ ನಾಡಿನ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯ ಅತಿಥಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಉಲ್ಫೇತುನಿಸ್ಸಾ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ಗ್ರಾಮದ ಮುಖಂಡ ರಾಜ್ ಮೊಹಮ್ಮದ್ ಸುರ್ನೋಬತ್, ಪತ್ರಕರ್ತ ಖಾಜಾ ಹುಸೇನ್ ಬಾಬಾ, ಅತಿಥಿ ಶಿಕ್ಷಕ ಸೋಮಣ್ಣ ನಾಯಕ, ಎಸ್‌ಡಿಎಂಸಿ ಉಪಾಧ್ಯಕ್ಷ ಶಿವಪ್ಪ ಅಂಜಳ್, ಸದಸ್ಯೆ ಮೀನಾಕ್ಷಿ ರಂಗಪ್ಪ ಗಾಜಲಿನ್ನಿ, ಅತಿಥಿ ಸಿಬ್ಬಂದಿಗಳಾದ ಮಲ್ಲಮ್ಮ, ದೊಡ್ಡಮ್ಮ ಯಲ್ಲಮ್ಮ ಸೇರಿದಂತೆ ಗ್ರಾಮದ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸ್ಥಳೀಯ ಗಣ್ಯರ ಭಾಗವಹಿಸುವಿಕೆಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.

ಕನ್ನಡ ಭಾಷೆಯ ಉಳಿವಿನೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ: ತಮ್ಮಣ್ಣ ಹೆರುಂಡಿ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸುವುದರ ಜೊತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಕರೆ ನೀಡಿದರು.

ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ನಮ್ಮ ಸಂಸ್ಕೃತಿ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ಮಕ್ಕಳಲ್ಲಿ ಕನ್ನಡಾಭಿಮಾನ ಮೂಡಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಸರ್ಕಾರಿ ಶಾಲೆಗಳು ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಪ್ರಮುಖ ಆಧಾರವಾಗಿವೆ. ಇಂತಹ ಶಾಲೆಗಳ ಅಭಿವೃದ್ಧಿಗೆ ಪಾಲಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಒಗ್ಗಟ್ಟಿನಿಂದ ಸಹಕಾರ ನೀಡಬೇಕು ಎಂದು ತಿಳಿಸಿದರು.