ಜಾಲಹಳ್ಳಿ, ಅ.29: ಸಾಮೂಹಿಕ ವಿವಾಹಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವುದರ ಜತೆಗೆ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ. ನಾಯಕ ಹೇಳಿದರು.

ಪಟ್ಟಣದ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗೋವಿಂದ ಸೇವಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ್ದ 76 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮದುವೆ ಪ್ರತಿಯೊಬ್ಬರ ಜೀವನದ ಮಹತ್ವದ ಘಟ್ಟವಾಗಿದ್ದು, ಇತ್ತೀಚಿನ ದಿನಗಳಲ್ಲಿ ವಿವಾಹ ಸಮಾರಂಭಗಳಿಗಾಗಿ ದುಂದು ವೆಚ್ಚ ಮಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲ ಸಮುದಾಯದ ಜನರನ್ನು ಒಗ್ಗೂಡಿಸಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವುದು ಸಮಾಜಕ್ಕೆ ಮಾದರಿಯಾದ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗೋವಿಂದ ಸೇವಾ ಸಮಿತಿಯು ಎಲ್ಲರ ಸಹಕಾರದೊಂದಿಗೆ 76 ಜೋಡಿಗಳ ವಿವಾಹವನ್ನು ಯಶಸ್ವಿಯಾಗಿ ನೆರವೇರಿಸಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳ ಮೂಲಕ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದರ ಜತೆಗೆ ಸಾಮಾಜಿಕ ತಾರತಮ್ಯವನ್ನು ದೂರಮಾಡಲು ಸಾಧ್ಯವಾಗುತ್ತದೆ ಎಂದರು.

ಶಾಸಕಿಯಾಗಿ ಆಯ್ಕೆಯಾದ ಬಳಿಕ ಜಾಲಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡ, ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುಗಳಿಗೆ ಮಾಂಗಲ್ಯ ನೀಡುವ ಮೂಲಕ ತಮ್ಮ ಕೈಲಾದ ಸೇವೆ ಸಲ್ಲಿಸುತ್ತಿದ್ದೇನೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು, ಪ್ರಸ್ತುತ ಗ್ರಾಮೀಣ ಪ್ರದೇಶಗಳಲ್ಲಿಯೂ ಒಂದು ವಿವಾಹ ನೆರವೇರಿಸಲು ₹5ರಿಂದ ₹6 ಲಕ್ಷದವರೆಗೆ ವೆಚ್ಚವಾಗುತ್ತಿದೆ. ಸಾಮಾನ್ಯ ಕುಟುಂಬಗಳಿಗೆ ಇಷ್ಟೊಂದು ಹಣ ಹೊಂದಿಸುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಗೋವಿಂದ ಸೇವಾ ಸಮಿತಿಯು ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದು ಪ್ರಶಂಸಿಸಿದರು.

ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಸ್ಥಾನವು ಪುರಾತನ ಇತಿಹಾಸ ಹೊಂದಿದ್ದು, ಪ್ರತಿವರ್ಷ ನಡೆಯುವ ಜಾತ್ರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಜಾತ್ರೆ ನಡೆಯುವ ಪ್ರದೇಶದಲ್ಲಿ ಕಟ್ಟಡಗಳು ಹಾಗೂ ಮನೆಗಳ ನಿರ್ಮಾಣ ಹೆಚ್ಚುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಜಾಗದ ಕೊರತೆ ಎದುರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೇವಸ್ಥಾನದ ಜಾತ್ರಾ ಸ್ಥಳವನ್ನು ಸಂರಕ್ಷಿಸುವ ಜವಾಬ್ದಾರಿ ಭಕ್ತರು ಹಾಗೂ ಗ್ರಾಮಸ್ಥರ ಮೇಲಿದೆ. ಅಗತ್ಯವಿದ್ದಲ್ಲಿ ಪೂಜಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಜಾತ್ರೆ ಹಾಗೂ ಸಾಮೂಹಿಕ ವಿವಾಹಗಳಂತಹ ಧಾರ್ಮಿಕ ಕಾರ್ಯಕ್ರಮಗಳಿಗೆ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಜಗದ್ಗುರು ಜಯಶಾಂತೇಶ್ವರ ಸ್ವಾಮಿಗಳು ನವದಂಪತಿಗಳಿಗೆ ಆಶೀರ್ವಚನ ನೀಡಿದರು. ಗಿರಿಯಪ್ಪ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಂದಕಲ್ ಮಠದ ಬಸವರಾಜ ರಾಜಗುರುಗಳು, ಮುಂಡರಗಿ ಶಿವಪ್ರಸಾದ ತಾತನವರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಂತಿ ರಾಂಪಾಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಣ್ಣ ಪಾಣಿ, ಬಸವರಾಜ ಪಂಪಾಪತಿ, ಅಂಗನವಾಡಿ ಮೇಲ್ವಿಚಾರಕಿ ಶಾಂತಬಾಯಿ, ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಅಷ್ಟಗಿ, ಸಿಪಿಐ ಪುಂಡಲೀಕ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮಹಾದೇವಪ್ಪ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾ. ಆರ್.ಎಸ್. ಹುಲಿಮನಿಗೌಡ, ತಿಮ್ಮಣ್ಣ ನಾಯಕ, ದಿವಾನ್ ಬಸವರಾಜ, ರಾಮುಲು ಗಲಗ, ಅನಂತರಾಜ ನಾಯಕ, ಗೋವಿಂದ ಸೇವಾ ಸಮಿತಿಯ ಗೋವಿಂದರಾಜ್ ತಿಂಪೂರು, ಮುದುರಂಗಪ್ಪ ಕ್ಯಾದಿಗೇರಾ, ವೆಂಕೋಬ ಪೂಜಾರಿ, ಸಿದ್ದಪ್ಪ ಗುಮೇದಾರ, ಚಂದ್ರಕಾಂತ ಚಿಕ್ಕಲ್, ವೇಣುಗೋಪಾಲ ಗೌಡ, ಅಮರೇಶ ಪಾಟೀಲ್, ಬಸನಗೌಡ ದೇಸಾಯಿ, ತಿಮ್ಮರೆಡ್ಡಿ, ಚಂದಪ್ಪ ಬುದ್ದಿನ್ನಿ, ಯಂಕಪ್ಪ ಮುರಾಳ ಸೇರಿದಂತೆ ಅನೇಕ ಗಣ್ಯರು, ಸಮಾಜದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಹನುಮಗೌಡ ಚಿಕ್ಕಲ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಪುತ್ರಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.