ಮಾನ್ವಿ: ಮಹಿಳೆಯರು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಪೋತ್ನಾಳದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸತೀಶ್ ಫೆರ್ನಾಂಡಿಸ್ ಹೇಳಿದರು.
ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಮೂಲಕ ಆದಾಯ ಗಳಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧವೆಯರು, ವಿಕಲಚೇತನ ವ್ಯಕ್ತಿಗಳ ಕುಟುಂಬದ ಸದಸ್ಯರು ಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಗುರುತಿಸಿ ಒಟ್ಟು 8 ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಮಹಿಳೆಯರು ಹೊಲಿಗೆ ಕೌಶಲ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಸ್ವಯಂ ಉದ್ಯೋಗವು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಸ್ವಾವಲಂಬಿ ಜೀವನಕ್ಕೆ ದಾರಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಾರ್ಲಿ ಉದ್ಬಾಳ, ಶಂಕರಪ್ಪ ಜೀನೂರು ಕ್ಯಾಂಪ್, ರಿಯಾಜ್ ಬೇಗಂ ಖರಾಬದಿನ್ನಿ ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಜೆಸ್ಸಿಂತಾ ಮುದ್ದನಗುಡ್ಡಿ, ಮಮತಾ, ಹುಚ್ಚಪ್ಪ, ಆರೋಗ್ಯಪ್ಪ ದುಮತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.



