ಲಿಂಗಸುಗೂರು: ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಡಿಸೆಂಬರ್ 8ರವರೆಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಹನುಮಂತರಾಯ ತಳ್ಳಳ್ಳಿ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕ್ಷಯರೋಗ ಪತ್ತೆ ಆಂದೋಲನದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ತಾಲೂಕಿನ ಒಟ್ಟು ಜನಸಂಖ್ಯೆಯ ಶೇ.20ರಷ್ಟು ಜನರನ್ನು ಸಮೀಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಸುಮಾರು 82,610 ಜನಸಂಖ್ಯೆ ಹಾಗೂ 16,266 ಮನೆಗಳನ್ನು ಸಮೀಕ್ಷೆಗೆ ಗುರುತಿಸಲಾಗಿದ್ದು, 80 ಆಶಾ ಕಾರ್ಯಕರ್ತೆಯರ ತಂಡಗಳು ನಿಗದಿಪಡಿಸಿದ ಗ್ರಾಮಗಳು ಮತ್ತು ವಾರ್ಡ್‌ಗಳಲ್ಲಿ ಮನೆಮನೆಗೆ ಭೇಟಿ ನೀಡಲಿವೆ ಎಂದು ಹೇಳಿದರು.

ಸಮೀಕ್ಷೆಯ ಸಂದರ್ಭದಲ್ಲಿ ಕ್ಷಯರೋಗದ ಲಕ್ಷಣಗಳು ಕಂಡುಬರುವ ವ್ಯಕ್ತಿಗಳಿಂದ ಕಫದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗುವುದು. ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವುದರಿಂದ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರಾಗಲು ನೆರವಾಗಬಹುದು ಎಂದು ತಿಳಿಸಿದರು.

ವಿಶೇಷವಾಗಿ ವೃದ್ಧರು, ಕ್ಷಯರೋಗಿಗಳ ಸಂಪರ್ಕದಲ್ಲಿರುವವರು, ಮಧುಮೇಹ ಹೊಂದಿರುವವರು, ಸಿಮೆಂಟ್ ಕಾರ್ಮಿಕರು, ಗಣಿ ಮತ್ತು ಹತ್ತಿ ಗಿರಣಿಗಳಲ್ಲಿ ಕೆಲಸ ಮಾಡುವವರು, ಧೂಮಪಾನ ಹಾಗೂ ಮದ್ಯಪಾನದ ಅಭ್ಯಾಸ ಹೊಂದಿರುವವರು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಮತ್ತು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಕ್ಷಯರೋಗದ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಅಗತ್ಯವಿರುವ ವ್ಯಕ್ತಿಗಳಿಗೆ ಎಕ್ಸ್‌ರೇ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಪರೀಕ್ಷೆಯಲ್ಲಿ ಕ್ಷಯರೋಗ ದೃಢಪಟ್ಟವರಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಉಚಿತ, ಗುಣಮಟ್ಟದ ಹಾಗೂ ಪರಿಣಾಮಕಾರಿ ಚಿಕಿತ್ಸೆಯನ್ನು ಒದಗಿಸಲಾಗುವುದು ಎಂದು ಹೇಳಿದರು.

ಕ್ಷಯರೋಗದ ಕುರಿತು ಸಾರ್ವಜನಿಕರು ಯಾವುದೇ ಭಯ ಅಥವಾ ತಪ್ಪು ಕಲ್ಪನೆ ಹೊಂದಬಾರದು. ರೋಗದ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಜ್ಞ ವೈದ್ಯ ಡಾ. ನೀಲಕಂಠ, ಆಪ್ತ ಸಮಾಲೋಚಕ ರವಿ ಬಳಿಗಾರ, ಪ್ರಯೋಗಾಲಯ ಮೇಲ್ವಿಚಾರಕ ಮಹಾಂತೇಶ ಬ್ಯಾಳಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕರಿಬಸಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿ ಸೀತಾ, ಆಶಾ ಕಾರ್ಯಕರ್ತೆ ರಾಜಕುಮಾರಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.