ಸಿಂಧನೂರು: ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಆರೋಪಗಳನ್ನು ಖಂಡಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ, ವಕೀಲ ಶೇಖರಪ್ಪ ದುಮತಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಡಿಗೋಳ ಗ್ರಾಮದಲ್ಲಿ ಆಂಜನೇಯ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ನಡೆದಿದೆ. ಘಟನೆ ಬಳಿಕ ಗ್ರಾಮದಲ್ಲಿ ಉಂಟಾಗಿರುವ ಜಾತಿ ಸಂಘರ್ಷ ಹಾಗೂ ಸಾಮಾಜಿಕ ಬಹಿಷ್ಕಾರದ ಸಮಸ್ಯೆಯನ್ನು ಪರಿಹರಿಸುವಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವಿಫಲವಾಗಿವೆ ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ 71 ಜನರ ವಿರುದ್ಧ ದಾಖಲಿಸಿರುವ ಪ್ರತಿದೂರು ಪ್ರಕರಣವನ್ನು (ಕೌಂಟರ್ ಕೇಸ್) ಹಿಂಪಡೆಯಬೇಕು. ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ದಲಿತ ಕುಟುಂಬಗಳಿಗೆ ತುರ್ತಾಗಿ ಉಚಿತ ಆಹಾರಧಾನ್ಯ ವಿತರಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಒದಗಿಸುವುದರ ಜತೆಗೆ ನಿರಂತರ ದೌರ್ಜನ್ಯ ಎಸಗುತ್ತಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮದಲ್ಲಿ ದೌರ್ಜನ್ಯ ನಡೆಸುತ್ತಿರುವ ಆರೋಪ ಎದುರಿಸುತ್ತಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡು ಗಡಿಪಾರು ಮಾಡಬೇಕು. ದಲಿತ ಕುಟುಂಬಗಳು ಭಯಮುಕ್ತ ವಾತಾವರಣದಲ್ಲಿ ಜೀವನ ನಡೆಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಿಡಿಗೋಳ ಗ್ರಾಮದಲ್ಲಿ ಇಂದಿಗೂ ಜಾತಿ ಆಧಾರಿತ ತಾರತಮ್ಯ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಸಮಸ್ಯೆಗಳು ಮುಂದುವರಿದಿವೆ. ಇವುಗಳನ್ನು ತಡೆಗಟ್ಟಲು ಸಂಬಂಧಿಸಿದ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿಲ್ಲ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರು ಇದುವರೆಗೂ ತಿಡಿಗೋಳ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳ ಸಮಸ್ಯೆ ಆಲಿಸಿಲ್ಲ ಎಂದು ಟೀಕಿಸಿದ ಶೇಖರಪ್ಪ ದುಮತಿ, ರಾಜಕೀಯ ಕಾರಣಗಳಿಂದ ಗ್ರಾಮಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ನವೆಂಬರ್ 8ರಂದು ನಡೆಯಲಿರುವ ‘ತಿಡಿಗೋಳ ಚಲೋ’ ಹೋರಾಟದಲ್ಲಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ. ಹೋರಾಟದ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಂಧನೂರು ತಾಲೂಕಿನ ಕೆಲವು ಇಲಾಖೆಗಳ ಅಧಿಕಾರಿಗಳು ಪದೇಪದೇ ವರ್ಗಾವಣೆಯಾಗಿ ಮತ್ತೆ ಅದೇ ಸ್ಥಳಕ್ಕೆ ನಿಯೋಜನೆಗೊಳ್ಳುತ್ತಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದರು. ಸರ್ಕಾರದ ವರ್ಗಾವಣೆ ನಿಯಮಗಳನ್ನು ಉಲ್ಲಂಘಿಸಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದರೆ, ಅಂತಹ ಪ್ರಕರಣಗಳ ವಿರುದ್ಧವೂ ಸಂಘಟಿತವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಮುಖಂಡರು ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಡಿ.ಎಚ್. ಪೂಜಾರ, ವೆಂಕಟೇಶ ಗಿರಿಜಾಲಿ, ಸಾಲೊಮನ್, ಹುಸೇನಪ್ಪ, ಭಾಷುಮಿಯಾ, ಬಿ.ಎನ್. ಯರದಿಹಾಳ, ಮಂಜುನಾಥ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.