ರಾಯಚೂರು, ಸೆ.18: ಕಳೆದ ನಾಲ್ಕು ವರ್ಷ ಎಂಟು ತಿಂಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ, ಅಧಿಕಾರಾವಧಿ ಮುಗಿಯುವ ಹಂತದಲ್ಲಿ ಸಮ್ಮೇಳನ ಆಯೋಜಿಸಲು ಮುಂದಾಗಿರುವುದರ ಉದ್ದೇಶವೇನು ಎಂದು ಅಣ್ಣಪ್ಪ ಮೇಟಿಗೌಡ ಪ್ರಶ್ನಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಸುವ ಬದಲು ಪರಿಸ್ಥಿತಿ ಸುಧಾರಿಸಿದ ಬಳಿಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಯೋಜಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಕ್ಟೋಬರ್ 24 ಮತ್ತು 25ರಂದು 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ಕೈಗೊಂಡಿದ್ದು, ಸ್ವಾಗತ ಸಮಿತಿಯನ್ನೂ ರಚಿಸಲಾಗಿದೆ.
ಸಮ್ಮೇಳನದ ದಿನಾಂಕ ನಿಗದಿಪಡಿಸುವ ಮುನ್ನ ಜಿಲ್ಲೆಯ ಸಾಹಿತಿಗಳು, ಕನ್ನಡಾಭಿಮಾನಿಗಳು ಹಾಗೂ ಪರಿಷತ್ತಿನ ಪ್ರತಿನಿಧಿಗಳ ಅಭಿಪ್ರಾಯ ಪಡೆಯಬೇಕಿತ್ತು. ಕೆಲವರನ್ನು ಮಾತ್ರ ಒಳಗೊಂಡ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪವಿದ್ದು, ಈ ಬಗ್ಗೆ ಜಿಲ್ಲಾ ಕಸಾಪ ಪದಾಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಮೇಟಿಗೌಡ ಒತ್ತಾಯಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕೆಲವರ ಕಾರ್ಯಕ್ರಮವಾಗದೆ ಜಿಲ್ಲೆಯ ಎಲ್ಲ ಕನ್ನಡಾಭಿಮಾನಿಗಳ ಹಬ್ಬವಾಗಬೇಕು. ಸಮ್ಮೇಳನವನ್ನು ಮುಂದೂಡಿ ನಂತರ ಎಲ್ಲರ ಸಹಭಾಗಿತ್ವದಲ್ಲಿ ನಡೆಸಿದರೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
ಪ್ರಸ್ತುತ ನಿರ್ಧಾರದಲ್ಲಿ ಬದಲಾವಣೆ ಆಗದಿದ್ದರೆ ಮುಂದಿನ ಹಂತದ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಲಾ ಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ್ ಉಪಸ್ಥಿತರಿದ್ದರು.



