ತುಂಗಾ ಬಿಂಬ/ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರೊಂದಿಗೆ ಭಾಗವಹಿಸಿದರು. ಕಲ್ಯಾಣ ಕರ್ನಾಟಕದ ವಿಮೋಚನಾ ಹೋರಾಟ, ತ್ಯಾಗ ಹಾಗೂ ಸ್ವಾಭಿಮಾನದ ಇತಿಹಾಸವನ್ನು ಸ್ಮರಿಸುವ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗವು ಐತಿಹಾಸಿಕ ಹಿನ್ನೆಲೆ ಹಾಗೂ ಹೋರಾಟದ ಪರಂಪರೆಯನ್ನು ಹೊಂದಿದ್ದು, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು. ಶಿಕ್ಷಣ, ಆರೋಗ್ಯ, ನೀರಾವರಿ, ಉದ್ಯೋಗ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸುವ ಮೂಲಕ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಮುಂಚೂಣಿಗೆ ತರುವ ಅಗತ್ಯವಿದೆ. ಇದಕ್ಕಾಗಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಎಲ್ಲರೂ ಸಹಕಾರದಿಂದ ಮುನ್ನಡೆಯಬೇಕು ಎಂದು ಹೇಳಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಎಂದರೆ ಈ ಭಾಗದ ಪ್ರತಿಯೊಬ್ಬರ ಬದುಕಿನ ಗುಣಮಟ್ಟವನ್ನು ಉತ್ತಮಪಡಿಸುವುದು. ಜನಕಲ್ಯಾಣ ಹಾಗೂ ಸಮಗ್ರ ಪ್ರಗತಿಯನ್ನು ಗುರಿಯಾಗಿಸಿಕೊಂಡು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸೋಣ ಎಂದು ಶಾಸಕ ಬಸನಗೌಡ ದದ್ದಲ್ ಕರೆ ನೀಡಿದರು.