ತುಂಗ ಬಿಂಬ/ರಾಯಚೂರು: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ರಾಯಚೂರು ಸಹಯೋಗದಲ್ಲಿ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಗಿಲ್ಲೇಸೂಗುರ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಸೆ.19ರಂದು ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಿಲ್ಲೇಸೂಗುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಆಶಯದಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಾಧ್ಯವಾದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಗಿಲ್ಲೇಸೂಗುರ ಹೋಬಳಿ ವ್ಯಾಪ್ತಿಯ ಗ್ರಾಮಸ್ಥರು ತಮ್ಮ ಸಮಸ್ಯೆ, ಬೇಡಿಕೆ ಹಾಗೂ ಅಹವಾಲುಗಳನ್ನು ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗುತ್ತದೆ. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿ, ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆ.

ಕಂದಾಯ, ಪಿಂಚಣಿ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್, ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಒಂದೇ ವೇದಿಕೆಯಲ್ಲಿ ಪರಿಹರಿಸಲು ನೆರವಾಗುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.