ರಾಯಚೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರ ಅಭಾವದಿಂದ ಭೀಕರ ಬರಗಾಲ ಉಂಟಾಗಿದ್ದು, ರೈತರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಾಸ ಮಾಲಿಪಾಟೀಲ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಬಿತ್ತಿದ ತೊಗರಿ, ಹತ್ತಿ, ಭತ್ತ, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳು ಸಮರ್ಪಕ ಮಳೆಯಿಲ್ಲದೆ ನಷ್ಟವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಸೆ.28ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 178 ತಾಲೂಕುಗಳಲ್ಲಿ ಬರಗಾಲದ ಪರಿಸ್ಥಿತಿ ಕಂಡುಬಂದಿದ್ದರೂ, 101 ತಾಲೂಕುಗಳನ್ನು ಮಾತ್ರ ಬರಗಾಲ ಪೀಡಿತವೆಂದು ಘೋಷಿಸಲಾಗಿದೆ. ರೈತರ ಬೆಳೆನಷ್ಟವನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬರಗಾಲವೆಂದು ಘೋಷಣೆ ಮಾಡಿದ ಪ್ರದೇಶಗಳಲ್ಲಿ ರೈತರ ಬೆಳೆನಷ್ಟಕ್ಕೆ ಪರಿಹಾರ ನೀಡುವುದರ ಜೊತೆಗೆ ರೈತರ ಖಾತೆಗೆ ತಕ್ಷಣ ಪರಿಹಾರದ ಹಣ ಜಮಾ ಮಾಡಬೇಕು. ಧನಕರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ನಾಲೆಗಳ ಕೊನೆಯ ಭಾಗದ ರೈತರಿಗೂ ಸಮರ್ಪಕ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸಮಸ್ಯೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ತೊಂದರೆಯಾಗುತ್ತಿದ್ದು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಜೋಳ ಖರೀದಿ ಕೇಂದ್ರಗಳಲ್ಲಿ ರೈತರಿಗೆ ಸೂಕ್ತ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಜೋಳವನ್ನು ಎಕರೆಗೆ ಬೆಳೆದ ಪ್ರಮಾಣದ ಆಧಾರದ ಮೇಲೆ ಖರೀದಿಸುವ ವ್ಯವಸ್ಥೆ ರೂಪಿಸಬೇಕು. ನಾರಾಯಣಪುರ ಬಲದಂಡೆ ನಾಲೆಯ ವಾರಾಬಂದಿ ಪದ್ಧತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ನೀರು ಹರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಲಿಂಗಸುಗೂರು ಹಾಗೂ ಮುದಗಲ್ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ರೈತರಿಂದ ಅನಧಿಕೃತವಾಗಿ ಕಮಿಷನ್ ವಸೂಲಿ ಹಾಗೂ ಸೂಟ್ ತೆಗೆಯಲಾಗುತ್ತಿದೆ ಎಂಬ ಆರೋಪಗಳಿದ್ದು, ಇದಕ್ಕೆ ಕಡಿವಾಣ ಹಾಕಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಫಸಲ್ ಬಿಮಾ ಯೋಜನೆಯಡಿ ಪ್ರೀಮಿಯಂ ತುಂಬಿದ ರೈತರಿಗೆ ಬೆಳೆನಷ್ಟ ಸಂಭವಿಸಿದಲ್ಲಿ ಮಧ್ಯವರ್ತಿಗಳ ತೊಂದರೆಯಿಲ್ಲದೆ ನೇರವಾಗಿ ರೈತರ ಖಾತೆಗೆ ಪರಿಹಾರ ಜಮೆಯಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯಲಿರುವ ಧರಣಿಯಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಚಾಮರಾಸ ಮಾಲಿಪಾಟೀಲ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಸೂಗುರಯ್ಯ ಆರ್.ಎಸ್. ಮಠ, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ ಸೇರಿದಂತೆ ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.