ರಾಯಚೂರು, ಅ.6: ವೈದ್ಯಕೀಯ ಮೇಲ್ವಿಚಾರಣಾಧಿಕಾರಿಗಳು (HIO) ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (PHCO) ಹುದ್ದೆಗಳನ್ನು ರದ್ದುಪಡಿಸಬೇಕು ಹಾಗೂ ಖಾಯಂ ನೌಕರರು ಕೆಲಸ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು (CHO) ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ರಾಯಚೂರು ಜಿಲ್ಲಾ ಶಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

HIO ಮತ್ತು PHCO ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳು, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಗ್ರಾಮೀಣ ಆರೋಗ್ಯ ಸೇವೆಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದು, ಅವರ ಸೇವೆಯನ್ನು ಅವಹೇಳನ ಮಾಡುವ ಹೇಳಿಕೆಗಳು ಸರಿಯಲ್ಲ ಎಂದು ಸಂಘ ತಿಳಿಸಿದೆ.

ಸಂಬಂಧಪಟ್ಟವರ ವಿರುದ್ಧ 15 ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳು ಹಾಗೂ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು-1966ರಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ಸಂಘ ಎಚ್ಚರಿಸಿದೆ.