ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.

ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಗ್ಗೆ ಕಾಂಗ್ರೆಸ್ ದೇಶದ ವಿವಿಧೆಡೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸುತ್ತಿದೆ.

ಪ್ರತಿಭಟನಾಕಾರರು ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಉಳಿಯಬೇಕಾದರೆ ಆಯೋಗದ ಪ್ರತಿಯೊಂದು ಪ್ರಕ್ರಿಯೆಯೂ ಪಾರದರ್ಶಕವಾಗಿರಬೇಕು. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಉದ್ಭವಿಸಿರುವ ಅನುಮಾನಗಳಿಗೆ ಚುನಾವಣಾ ಆಯೋಗ ಸಮರ್ಪಕ ಉತ್ತರ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಅರ್ಹ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಮಾತನಾಡಿ, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಕಾಂಗ್ರೆಸ್ ಪರವಾಗಿರುವ ಹಾಗೂ ಬಿಜೆಪಿಗೆ ವಿರೋಧವಾಗಿರುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವನ್ನು ಮುಂದಿಟ್ಟ ಅವರು, ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯ ಮೇಲೂ ಕೇಂದ್ರ ಸರ್ಕಾರದ ಪ್ರಭಾವವಿದೆ ಎಂದು ದೂರಿದರು. ಮತದಾನದ ಹಕ್ಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆಗಾಗಿ ಕಾಂಗ್ರೆಸ್ ತನ್ನ ಹೋರಾಟ ಮುಂದುವರಿಸಲಿದೆ ಎಂದರು.

ಎಸ್‌ಐಆರ್ ಕುರಿತು ಕಾಂಗ್ರೆಸ್ ಇದೇ ರೀತಿಯ ಆರೋಪಗಳನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿಯೂ ಮುಂದಿಟ್ಟಿದೆ. ಮತ್ತೊಂದೆಡೆ, ಚುನಾವಣಾ ಆಯೋಗವು ಎಸ್‌ಐಆರ್‌ಗೆ ಸಂಬಂಧಿಸಿದ ತನ್ನ ಆದೇಶಗಳು ಮತ್ತು ನಿರ್ಧಾರಗಳಿಗೆ ಕಾನೂನು ಮಾನ್ಯತೆ ಇದೆ ಹಾಗೂ ಆಯೋಗದೊಳಗಿನ ವಿಭಿನ್ನ ಅಭಿಪ್ರಾಯಗಳು ಸಾಂಸ್ಥಿಕ ಚರ್ಚೆಯ ಸಹಜ ಭಾಗವೆಂದು ಪ್ರತಿಪಾದಿಸಿದೆ.

ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಜ್ಞಾನೇಶ್ ಕುಮಾರ್ ಅವರ ಮುಖವಾಡ ಧರಿಸಿ, ಕೈಗೆ ಕೋಳ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು ಗಮನ ಸೆಳೆಯಿತು. ಪ್ರತಿಭಟನಾಕಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಮತದಾರರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಸ್ಲಾಂ ಪಾಷಾ, ಬಷೀರುದ್ದೀನ್, ಅಬ್ದುಲ್ ಕರೀಂ, ದಸ್ತಗೀರ್, ಶ್ರೀದೇವಿ ನಾಯಕ, ಪವನ್ ಕುಮಾರ್ ಪಾಟೀಲ್, ಗಿರಿಯಪ್ಪ ನೆಲಹಾಳ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲ ಬೆಣ್ಣೆ, ಬಿ. ಉಮಾ, ಕವಿತಾ, ಪ್ರತಿಭಾ ರೆಡ್ಡಿ, ವಂದನಾ ಶಿವಕುಮಾರ್, ಜ್ಯೋತಿ ಎಸ್.ಎಂ. ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.