ಬೆಂಗಳೂರು: ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ, ದೇವದುರ್ಗ ತಾಲೂಕಿನ ಚಿಕ್ಕಹೊನಕುಣಿಯಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ ಸಂಖ್ಯೆ–6ರ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಸ್ಥಳಾಂತರ ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದರು.

ಚಿಕ್ಕಹೊನಕುಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಿದರೆ ದೇವದುರ್ಗ ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಗೆ ಆಡಳಿತಾತ್ಮಕ ಕೆಲಸಗಳಿಗಾಗಿ ದೂರದ ಸ್ಥಳಗಳಿಗೆ ತೆರಳಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ಕಾಲುವೆ, ನೀರಾವರಿ ಹಾಗೂ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಪರಿಹಾರಕ್ಕೂ ಅನಾನುಕೂಲ ಉಂಟಾಗುವ ಸಾಧ್ಯತೆ ಇದೆ ಎಂದು ಶಾಸಕಿ ಮನವರಿಕೆ ಮಾಡಿಕೊಟ್ಟರು.

ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯಪಾಲಕ ಎಂಜಿನಿಯರ್ ಕಚೇರಿಯನ್ನು ಪ್ರಸ್ತುತ ಇರುವ ಚಿಕ್ಕಹೊನಕುಣಿಯಲ್ಲಿಯೇ ಮುಂದುವರಿಸಬೇಕು. ಕಚೇರಿ ಸ್ಥಳಾಂತರಕ್ಕೆ ಸಂಬಂಧಿಸಿದ ಆದೇಶವನ್ನು ಮರುಪರಿಶೀಲಿಸಿ ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕಚೇರಿಯು ಸ್ಥಳೀಯ ರೈತರು ಮತ್ತು ಸಾರ್ವಜನಿಕರಿಗೆ ಅನುಕೂಲಕರವಾಗಿದ್ದು, ನೀರಾವರಿ ಸಂಬಂಧಿತ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಸಹಕಾರಿಯಾಗಿದೆ. ಹೀಗಾಗಿ ಕಚೇರಿ ಸ್ಥಳಾಂತರವಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಗಣಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕಿ ತಿಳಿಸಿದ್ದಾರೆ.