ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ INDIA ಒಕ್ಕೂಟದ ಸಂಸದರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಟಿಎಂಸಿ ಸೇರಿದಂತೆ INDIA ಒಕ್ಕೂಟದ ವಿವಿಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಕೂಡ ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಸಂಸತ್ತಿನ ಮಕರ ದ್ವಾರದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಾಚನ್ ಸದನ್’ ಕಡೆಗೆ ಸಂಸದರು ಮೆರವಣಿಗೆ ನಡೆಸಿ, ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿಗಳ ಪರಿಷ್ಕರಣೆಯ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಡುವ ಆತಂಕವಿದೆ ಎಂದು ಆರೋಪಿಸಿದ ನಾಯಕರು, ಪ್ರಕ್ರಿಯೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು “ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸಿ”, “ಮತದಾರರ ಹಕ್ಕುಗಳನ್ನು ರಕ್ಷಿಸಿ” ಹಾಗೂ “ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಲಿ” ಎಂಬ ಬೇಡಿಕೆಗಳನ್ನು ಮುಂದಿಟ್ಟರು.
ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ನಾಯಕರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು. ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸ ಕಾಪಾಡುವುದು ಅತ್ಯಂತ ಮುಖ್ಯವಾಗಿದ್ದು, ಅರ್ಹ ಮತದಾರರ ಮತದಾನದ ಹಕ್ಕಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಎಸ್ಐಆರ್ ಪ್ರಕ್ರಿಯೆಯ ಕುರಿತು ಪಾರದರ್ಶಕತೆ ಕಾಪಾಡಿ, ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ನಾಗರಿಕರ ಹೆಸರು ಅನ್ಯಾಯವಾಗಿ ಕೈಬಿಡದಂತೆ ಖಚಿತಪಡಿಸಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿತ್ತು.



