ಮಾನ್ವಿ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆಡಳಿತಾತ್ಮಕ ಸೇವೆಗಳನ್ನು ಮನೆ ಬಾಗಿಲಿನಲ್ಲೇ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ತಾಲೂಕಿನ ಕಪಗಲ್ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಪಗಲ್ ಹೋಬಳಿ ಮಟ್ಟದ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ರಸ್ತೆ, ಶುದ್ಧ ಕುಡಿಯುವ ನೀರು, ಗ್ರಾಮ ಪಂಚಾಯಿತಿ ಸೇವೆಗಳು, ವಿವಿಧ ಸಾಮಾಜಿಕ ಭದ್ರತಾ ವೇತನಗಳು, ಪಡಿತರ ಚೀಟಿ, ರೈತರ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದ ತಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳನ್ನು ಸೂಕ್ತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ಅಧಿಕಾರಿಗಳ ಗಮನಕ್ಕೆ ತರಬಹುದು. ಸಾಧ್ಯವಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಸಾರ್ವಜನಿಕರಿಂದ ಕಂದಾಯ ಇಲಾಖೆಗೆ 6, ತಾಲೂಕು ಪಂಚಾಯಿತಿಗೆ 10, ಶಿಕ್ಷಣ ಇಲಾಖೆಗೆ 1, ರೈಲ್ವೆ ಇಲಾಖೆಗೆ 1, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ 2 ಹಾಗೂ ಸರ್ವೆ ಇಲಾಖೆಗೆ 4 ಅರ್ಜಿಗಳು ಸೇರಿದಂತೆ ಒಟ್ಟು 24 ಅರ್ಜಿಗಳು ಸಲ್ಲಿಕೆಯಾಗಿವೆ.
ಅರಣ್ಯ ಇಲಾಖೆ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೊರೆಯುವ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಮಳಿಗೆಗಳನ್ನು ತೆರೆಯಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ತಾಲೂಕು ಪಂಚಾಯಿತಿ ಇಒ ಖಾಲಿದ್ ಅಹ್ಮದ್, ಬಿಸಿಎಂ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಭಾಗಯ್ಯ ನಾಯಕ, ಸಮಾಜ ಕಲ್ಯಾಣಾಧಿಕಾರಿ ಸಾಯಿರಾ ಬಾನು ನಾದಪ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜ, ವಲಯ ಅರಣ್ಯಾಧಿಕಾರಿ ಪುರುಷೋತ್ತಮರಾವ್ ಜೀ., ಗ್ರಾಮ ಪಂಚಾಯಿತಿ ಪಿಡಿಒ ಜುಬೇರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.



