ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.

ಇತ್ತೀಚೆಗೆ ನಗರದ ಬೋಸರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಂಘದ ನಿಯೋಗ, ಸಮ್ಮೇಳನದ ಆಯೋಜನೆ, ಪೂರ್ವಸಿದ್ಧತೆಗಳು ಹಾಗೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಕುರಿತು ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಸ್. ಬೋಸರಾಜ್, ಜಿಲ್ಲೆಯಲ್ಲಿ ಈ ಹಿಂದೆ ಅನೇಕ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಅನುಭವವಿದೆ. ಅದೇ ರೀತಿಯಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನೂ ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸೋಣ ಎಂದು ಭರವಸೆ ನೀಡಿದರು.

ಸಮ್ಮೇಳನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ, ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ, ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ, ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ್, ಉಪಾಧ್ಯಕ್ಷ ಮಹಾನಂದ ನಾಯಕ, ಖಜಾಂಚಿ ಮಲ್ಲಿಕಾರ್ಜುನಯ್ಯ ಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನೀಲಕಂಠ ಸ್ವಾಮಿ, ಪ್ರಸನ್ನ ಜೈನ್, ಸುರೇಶ ರೆಡ್ಡಿ, ಪತ್ರಕರ್ತ ರಾಮಕೃಷ್ಣ ದಾಸರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.